ಕಾರವಾರ: ಜಿಲ್ಲೆಯ ಎಲ್ಲ ಗ್ರಾಮ ಮತ್ತು ನಗರಗಳ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ , ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಆದೇಶಿಸಿದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಾಯಿ ಕಡಿತ ಮತ್ತು ರೇಬೀಸ್ ರೋಗದ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲೆಯ ಶಾಲೆ, ಕಾಲೇಜ್ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೂ ಕೂಡಾ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸಬೇಕು. ಬೀದಿ ನಾಯಿಗಳು ಮತ್ತು ಸಾಕು ನಾಯಿಗಳು ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು. ರಸ್ತೆ ಬದಿಯಲ್ಲಿ ಶಾಲೆಗಳ ಸಮೀಪ ಆಹಾರ ತ್ಯಾಜ್ಯಗಳ ಶೇಖರಣೆಯಾಗದಂತೆ ಕ್ರಮ ವಹಿಸಬೇಕು ಎಂದರು.
ಇದನ್ನೂ ಓದಿ:ಎಂಟು ತಿಂಗಳಲ್ಲಿ 6 ಸಾವಿರ ಜನರಿಗೆ ಕಚ್ಚಿದ ನಾಯಿಗಳು
ಡಿಎಚ್‌ಒ ಡಾ.ನೀರಜ್ ಬಿ.ವಿ, ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರೇಬಿಸ್ ನಿರೋಧಕ ಚುಚ್ಚುಮದ್ದು ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಇದೆ ಎಂದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ರಾಕೇಶ ಬಂಗಲೆ ಮಾತನಾಡಿ, ಇಲಾಖೆ ವತಿಯಿಂದ ಬೀದಿ ನಾಯಿಗಳಿಗೆ ಸುರಕ್ಷಿತ ಸಂತಾನ ಶಕ್ತಿ ಹರಣ ಚಿಕಿತ್ಸೆ ಮತ್ತು ಲಸಿಕೆ ನೀಡಲು ಎಲ್ಲ ಸೌಲಭ್ಯಗಳಿವೆ ಎಂದರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗಿಸ್ ಇದ್ದರು.
ವಿಜಯವಾಣಿ ವರದಿ
6 ಸಾವಿರ ಜನರಿಗೆ ಕಚ್ಚಿದ ಗ್ರಾಮ ಸಿಂಹ ಎಂಬ ಶೀರ್ಷಿಕೆಯಡಿ ಸೆ.22 ರಂದು ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು. ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಆಗುತ್ತಿರುವ ಸಮಸ್ಯೆಗಳ ಸಮಗ್ರ ಚಿತ್ರಣವನ್ನು ವರದಿ ಬಿಚ್ಚಿಟ್ಟಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ರಕ್ಷಣ ಸಭೆ ನಡೆಸಿ ಬೀದಿ ನಾಯಿಗಳ ಹಾವಳಿಯಿಂದಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಮುಂದಾಗಿದೆ.