ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ದೀನ ದುರ್ಬಲರು, ಹಿಂದುಳಿದ ವರ್ಗಗಳ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗದ ಜನರು ಶಿಕ್ಷಣವಂತರಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾದವರು ಎಂದು ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ತಾಪಂ ಇಒ ಸಚಿನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಜಾನುವಾರು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಶೇಷಗಿರಿ ನಾಯಕ್ ಸ್ವಾಗತಿಸಿದರು.ಪಾಣೆಮಂಗಳೂರು ವಸತಿ ನಿಲಯ ವಿದ್ಯಾರ್ಥಿನಿ ಶ್ರೇಯಾ ನಿರೂಪಿಸಿದರು. ವಾಮದಪದವು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನಿಲಯ ಪಾಲಕ ಆನಂದ ವಂದಿಸಿದರು.