ಮಡಿಕೇರಿ: ಮುಂದಿನ ಶೈಕ್ಷಣಿಕ ಸಾಲಿನ ಒಳಗೆ ನೂತನ ಕಟ್ಟಡವನ್ನು ಪೂರ್ಣಗೊಳಿಸಿ ಕಾಲೇಜಿಗೆ ವರ್ಗಾಯಿಸುವುದರ ಮೂಲಕ ಶೈಕ್ಷಣಿಕ ವರ್ಷದಲ್ಲಿ ಹೊಸ ಕಟ್ಟಡದಲ್ಲಿ ಕಾಲೇಜು ಪ್ರಾರಂಭಿಸುವುದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಮಂತರ್‌ಗೌಡ ತಿಳಿಸಿದರು.
ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಪರಿಷತ್ತು, ಸಾಂಸ್ಕೃತಿಕ, ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ವಿಧ್ಯಾಭ್ಯಾಸದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರೊ.ಸೀನಪ್ಪ, ವಿದ್ಯಾರ್ಥಿಗಳು ಉದಾತ್ತವಾದ ಆಲೋಚನೆಗಳು, ಆತ್ಮವಿಶ್ವಾಸ, ಶಿಸ್ತು, ಸತತ ಅಭ್ಯಾಸ, ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪಡಬೇಕಾದ ಸತತ ಪರಿಶ್ರಮ ಮತ್ತಿತರ ರೂಢಿಸಿಕೊಳ್ಳಬೇಕು ಎಂದು ವಿವರಿಸಿದರು.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ತಮ್ಮ ಗುರಿಸಾಧನೆಗೆ ಪ್ರಯತ್ನ ಪಡಬೇಕು. ಯಾವುದೇ ಕಾರಣಕ್ಕೂ ತಂದೆ ತಾಯಿಗಳಿಗೆ ಅಗೌರವ ತೋರದೆ ಅವರ ಮಾರ್ಗದರ್ಶನದಂತೆ ಮನೆಯಲ್ಲಿಯೂ, ಗುರುಗಳ ಮಾರ್ಗದರ್ಶನದಂತೆ ಸಮಾಜದಲ್ಲಿಯೂ ಜೀವನ ನಡೆಸುವಂತೆ ತಿಳುವಳಿಕೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಕೆ.ಸರಸ್ವತಿ, ಈ ದಿನ ಉದ್ಘಾಟನೆಗೊಂಡಿರುವ ಸಾಂಸ್ಕೃತಿಕ ಮತ್ತು ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಲಿದೆ. ಸಾಧ್ಯವಾದಷ್ಟು ಎಲ್ಲಾ ವಿದ್ಯಾರ್ಥಿಗಳು ತಮಗೆ ದೊರೆತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಇಂಗ್ಲೀಷ್ ಸಹ ಪ್ರಾಧ್ಯಾಪಕ ಎನ್.ಪಿ.ಸತೀಶ್, ಗೆಜೆಟೆಡ್ ಮ್ಯಾನೇಜರ್ ಕೆ.ಪಿ.ರವಿಕಿರಣ್, ದೈಹಿಕ ಶಿಕ್ಷಣ ನಿರ್ದೇಶಕ ರಾಖಿ ಪೂವಣ್ಣ, ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಗಳು ಇದ್ದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕ ಕಿಶೋರ್ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.