ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. 1.86 ಲಕ್ಷ ಗೃಹಲಕ್ಷ್ಮೀಯರಿಗೆ ನಗದು ಖಾತ್ರಿಯ ಮೊಬೈಲ್ ಸಂದೇಶ ರವಾನೆಯ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಏಕಕಾಲಕ್ಕೆ ಚಾಲನೆಗೊಂಡ ಯೋಜನೆ ಅನುಷ್ಠಾನದ ರಾಜ್ಯಮಟ್ಟದ ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಫಲಾನುಭವಿಗಳು ಎಲ್‌ಇಡಿ ಪರದೆಯ ಮೂಲಕ ವೀಕ್ಷಿಸಿ ಸಂಭ್ರಮಿಸಿದರು. ಗ್ರಾಪಂ ಮಟ್ಟದಿಂದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ 105 ಪಂಚಾಯಿತಿ ವ್ಯಾಪ್ತಿಯಲ್ಲಿ 103 ಕಡೆಗಳಲ್ಲಿ ಹಾಗೂ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ 42 ಕಡೆಗಳಲ್ಲಿ ಎಲ್‌ಇಡಿ ಟಿವಿಗಳನ್ನು ಅಳವಡಿಸಿ ಲಾನುಭವಿಗಳು ಹಾಗೂ ಸಾರ್ವಜನಿಕರು ಕುಳಿತು ಮೈಸೂರಿನಲ್ಲಿನ ರಾಜ್ಯಮಟ್ಟದ ಕಾರ್ಯಕ್ರಮದ ನೇರವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ದೇವನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ, ಲಾನುಭವಿಗಳ ಆಯ್ಕೆ ಹಾಗೂ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿದರು. ಹೊಸಕೋಟೆ ತಾಲೂಕು ನಂದಗುಡಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯೋಜನೆ ಕುರಿತು ಮಾಹಿತಿ ನೀಡಿದರು.
ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮಿ
ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಹೇಳಿದರು.
ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದೇವನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವುದರಿಂದ ಕುಟುಂಬದ ಜೀವನ ಪರಿಸ್ಥಿತಿ ಸುಧಾರಿಸಲು ಸಹಕಾರಿಯಾಗಲಿದೆ, ಮಹಿಳೆಯರನ್ನು ಸಶಕ್ತರನ್ನಾಗಿಸಿ ಸ್ವಾವಲಂಬನೆಯ ಬದುಕು ಸಾಗಿಸಲು, ಅರ್ಥಿಕವಾಗಿ ಸಬಲರಾಗಲು ಈ ಯೋಜನೆ ಉಪಯುಕ್ತವಾಗಿದೆ ಎಂದರು.
ಜಿಲ್ಲೆಯಾದ್ಯಂತ 144 ಕಡೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಕಡೆಗಳಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದಕ್ಕಾಗಿ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಶ್ಲಾಸಿದರು.
ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ 2.25 ಲಕ್ಷ ಲಾನುಭವಿಗಳನ್ನು ಗುರುತಿಸಲಾಗಿದ್ದು, ಪ್ರಸ್ತುತ 1.86 ಲಕ್ಷ ಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಉಳಿದ ಎಲ್ಲರನ್ನು ಯೋಜನೆ ವ್ಯಾಪ್ತಿಗೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಆರ್ಥಿಕ ಸಬಲತೆಗೆ ದಿಟ್ಟ ಹೆಜ್ಜೆ
ನಂದಗುಡಿ: ಕುಟುಂಬ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಅಚ್ಚುಕಟ್ಟಾಗಿ ನಡೆಯಲಿದೆ. ಆದ್ದರಿಂದ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು2 ಸಾವಿರ ರೂ.ನಗದು ನೀಡುವ ‘ಗೃಹಲಕ್ಷ್ಮೀ’ ಯೋಜನೆಯನ್ನು ಜಾರಿಗೆ ತಂದಿದೆ. ಇದು ಮಹಿಳಾ ಆರ್ಥಿಕ ಸಬಲತೆಗೆ ದಿಟ್ಟಹೆಜ್ಜೆಯಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಹೇಳಿದರು.
ನಂದಗುಡಿ ಹೋಬಳಿ ಮುಗಬಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರ ಉತ್ತಮ ಯೋಜನೆ ಜಾರಿಗೊಳಿಸಿದೆ. ಆರ್ಥಿಕವಾಗಿ ಸದೃಢರಾದ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ಉದ್ಯೋಗ, ವೃತ್ತಿಯಲ್ಲಿ ತೊಡಗದೆ ಇರುವ ಅನೇಕ ಮಹಿಳೆಯರು ತಾವು ಬಯಸಿದ ವಸ್ತುಸೇವೆ ಪಡೆಯಲು ಇಂದಿಗೂ ತಂದೆ, ಪತಿಯ ಮೇಲೆ ಅವಲಂಬಿತರಾಗಿದ್ದು, ಸರ್ಕಾರದ ಈ ಯೋಜನೆಯು ಅವರನ್ನು ಆರ್ಥಿಕವಾಗಿ ಸಲಬರನ್ನಾಗಿಸುತ್ತದೆ ಎಂದು ತಿಳಿಸಿದರು.
ಶಾಸಕರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ, ಜಿಪಂ ಉಪಕಾರ್ಯದರ್ಶಿ ರಮೇಶ್, ಜಿಪಂ ಯೋಜನಾ ನಿರ್ದೇಶಕರಾದ ವಿಠಲ್ ಕವಳೆ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ನಾಗರಾಜ್, ಹೊಸಕೋಟೆ ತಾಪಂ ಇಒ ಚಂದ್ರಶೇಖರ್, ತಹಸೀಲ್ದಾರ್ ವಿಜಯಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಖಾ, ತಾವರೆಕೆರೆ ಗ್ರಾಪಂ ಅಧ್ಯಕ್ಷ ರಮೇಶ್ ಉಪಾಧ್ಯಕ್ಷೆ ಅಸ್ಮಾತ್, ಶಿವನಾಪುರ ಗ್ರಾಪಂ ಅಧ್ಯಕ್ಷೆ ಮಂಜುಳಾ , ಉಪಾಧ್ಯಕ್ಷೆ ಪದ್ಮಾ, ದೊಡ್ಡನಲ್ಲಾಳ ಗ್ರಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಪ್ರಕಾಶ್, ತಾಪಂ ಮಾಜಿ ಅಧ್ಯಕ್ಷರಾದ ಟಿ.ಎಸ್. ರಾಜಶೇಖರ್, ಡಿ.ಟಿ. ವೆಂಕಟೇಶ್, ಮಾಜಿ ಸದಸ್ಯ ನಂಜಪ್ಪ , ಉದ್ಯಮಿಗಳಾದ ಕಲ್ಕೆರೆ ಕೆ.ಎಸ್. ಮಹದೇವಯ್ಯ, ಎಂ. ಮಂದೀಪ್ ಗೌಡ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ನಾರಾಯಣಸ್ವಾಮಿ ಇತರರು ಇದ್ದರು.