ಮಡಿಕೇರಿ: ರಾಷ್ಟ್ರೀಯ ಜಂತುಹುಳು ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಮಾ.೧೩ ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ೧ ರಿಂದ ೧೯ ವ?ರ್ದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಆಲ್‌ಬೆಂಡ್‌ಜೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದ ಅವರು, ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ದೇಶದಾದ್ಯಂತ ಮಾ.೧೩ ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ(ಎನ್‌ಡಿಡಿ) ಜರುಗಲಿದೆ. ಮಾ.೧೪ ರಿಂದ ೨೫ ರವರೆಗೆ ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, ೧-೧೯ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್-೪೦೦ ಎಂ.ಜಿ ಮಾತ್ರೆ ನೀಡಲಾಗುತ್ತದೆ ಎಂದು ತಿಳಿಸಿದರು.
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ೬-೧೯ ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ೬-೧೯ ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಿದ್ದಾರೆ ಎಂದ ಅವರು, ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಕೋರಿದರು.
ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ(ಎನ್‌ಡಿಡಿ) ಕೊಡಗು ಜಿಲ್ಲೆಯಲ್ಲಿ ೧-೧೯ ವರ್ಷದೊಳಗಿನ ಮಕ್ಕಳ ಗುರಿ ೧,೪೭,೦೩೯ ಹೊಂದಿದೆ. ಇದರಲ್ಲಿ ಅಂಗನವಾಡಿ ಮಕ್ಕಳು ೨೯,೪೯೯, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು ೭,೫೬೫, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೯೨,೮೭೩ ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ೧೫,೭೫೭, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧,೩೪೫ ಮಾತ್ರೆ ವಿತರಿಸಲಾಗುತ್ತದೆ ಎಂದರು.
ಕಾರ್ಯಕ್ರಮ ಅನುಷ್ಠಾನಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್‌ಡಿಡಿ ಕಾರ್ಯಕ್ರಮದ ಬಗ್ಗೆ ತರಬೇತಿ ನೀಡಲಾಗಿದೆ ಎಂದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.