ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಆನಂದ್ ಮಾತನಾಡಿದರು. ರಜಿತಾ, ಲೀಲಾವತಿ , ಹರೀಶ್ ಇದ್ದರು.  
ಜಿಲ್ಲೆ

ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳ ಸಂಸ್ಥೆ ಕೊಡುಗೆ ಅಪಾರ

ವಿರಾಜಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರ ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಬಣ್ಣಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ವಿರಾಜಪೇಟೆ ತಾಲೂಕಿನ ಸರ್ಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ತಮ್ಮ ಶಾಲೆಗೆ ನೀಡಿರುವ ಜ್ಞಾನದೀಪ ಶಿಕ್ಷಕರನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಶಾಲೆಯ ಮುಖ್ಯಶಿಕ್ಷಕರಿಗೆ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಯೋಜನೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ನೀಡುವ ಮೂಲಕ ಬಡಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದೆ. ಈ ಸಾಲಿನಲ್ಲಿ ತಾಲೂಕಿನ 8 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು ತಿಳಿಸಿದರು.

ಸಾಹಿತಿ ರಜಿತಾ ಮಾತನಾಡಿ, ಯೋಜನೆಯ ಮುಖಾಂತರ ಸಮಾಜಮುಖಿ ಕೆಲಸ ಹಮ್ಮಿಕೊಂಡಿರುವುದು ಶ್ಲಾಘನೀಯ. ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಆ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜ್ಞಾನದೀಪ ಶಿಕ್ಷಕರು ನೇಮಕ ಮಾಡಿರುವುದು ಶ್ಲಾಘನೀಯ ಎಂದರು.

ವಿರಾಜಪೇಟೆ ತಾಲೂಕಿನ 8 ಶಾಲೆಗಳನ್ನು ಜ್ಞಾನದೀಪ ಶಿಕ್ಷಕರ ನೇಮಕಾತಿಗಾಗಿ ಆಯ್ಕೆ ಮಾಡಲಾಗಿದ್ದು, ಹರಿಹರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾನೂರು ನಾಣಚಿ ಹಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಡ್ಲೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡಿಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚೀನಿವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೀರುಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಲಾಗಿದೆ.

ಯೋಜನೆಯ ತಾಲೂಕು ಯೋಜನಾಧಿಕಾರಿ ಪಿ.ಹರೀಶ್, ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.