ಜಿಲ್ಲೆ

ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ


ಮದ್ದೂರು: ಕಳೆದ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನವನ್ನು ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಅ. 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಅಧ್ಯಕ್ಷ ಜಿ.ಸಿ.ಶಿವಪ್ಪ ಹೇಳಿದ್ದಾರೆ.


ಸರ್ಕಾರ ಸುವರ್ಣ ಸಂಭ್ರಮ ಕರ್ನಾಟಕ ಆಚರಣೆ ಮಾಡುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ 29 ವರ್ಷಗಳಿಂದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ನಡೆಸುತ್ತ ಯಾವುದೇ ಸರ್ಕಾರದ ಅನುದಾನವಿಲ್ಲದೆ ಸಂಕಷ್ಟದಲ್ಲಿರುವ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ.


ಕನ್ನಡ ಶಾಲೆಗಳೇ ಮುಚ್ಚಿ ಹೋದಾಗ ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಯುವುದಾದರೂ ಹೇಗೆ? ಸರ್ಕಾರಕ್ಕೆ ಕನ್ನಡ ಭಾಷೆಯ ಮೇಲಿನ ಅಭಿಮಾನ ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಬರುತ್ತದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾತ್ರ ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.