ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ ಲಾಡ್​ ಮಾತನಾಡಿದರು. 
ಧಾರವಾಡ

ಕುಡಿಯುವ ನೀರಿನ ಸಮಸ್ಯೆಯಾದರೆ ಸೂಕ್ತ ಕ್ರಮ

ಮಂಜುನಾಥ ಅಂಗಡಿ
ಧಾರವಾಡ: ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯ ನಗರ- ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಅನಾನುಕೂಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಎಚ್ಚರಿಕೆ ನೀಡಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 3ನೇ ತೆಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುವ ಗ್ರಾಮಗಳನ್ನು ಈಗಾಗಲೇ ಗುರುತಿಸಿರುವುದು ಉತ್ತಮ ಕ್ರಮ. ನೀರಿನ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪಿಡಿಒಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು. ಕೆಲ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ ಎಂಬ ದೂರುಗಳು ಇವೆ. ಇಒಗಳು ಆಯಾ ತಾಲೂಕು ಕೇಂದ್ರಸ್ಥಾನದಲ್ಲಿ ಇರಬೇಕು. ಇಲ್ಲದಿದ್ದರೆ ನೋಟಿಸ್​ ನೀಡಿ ಕ್ರಮ ಜರುಗಿಸಬೇಕು ಎಂದು ಸಚಿವ ಲಾಡ್​, ಜಿಲ್ಲಾಧಿಕಾರಿಗೆ ಸೂಚಿಸಿದರು. ವಿದ್ಯುತ್​ ಸಮಸ್ಯೆಗಳಿದ್ದರೆ ಪವರ್​ಮನ್​ಗಳು ತುರ್ತಾಗಿ ಸ್ಪಂದಿಸಬೇಕು. ಅಗತ್ಯವಿದ್ದಲ್ಲಿ ಟ್ರಾನ್ಸ್​ಾರ್ಮರ್​ಗಳ ದುರಸ್ತಿ ಮತ್ತು ಬದಲಾವಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಕೃಷಿ ವಿಶ್ವವಿದ್ಯಾಲಯದವರು ವಿವಿಧ ಬೆಳೆಗಳ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು. ಈ ವರ್ಷ ಮಾವಿನ ಮರಗಳು ಉತ್ತಮವಾಗಿ ಹೂವು ಬಿಟ್ಟಿದ್ದವು. ಆದರೆ, ಜಿಗಿ ಬಾಧೆಯಿಂದ ಹೂವು& ಮಿಡಿಗಳು ಉದುರುತ್ತಿವೆ. ಈ ಬಗ್ಗೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆಯವರು ರೈತರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಶಾಸಕರಾದ ಎನ್​.ಎಚ್​. ಕೋನರಡ್ಡಿ, ಎಂ. ಆರ್​. ಪಾಟೀಲ, ಪ್ರದಿಪ ಶೆಟ್ಟರ್​, ಜಿಲ್ಲಾ-ಧಿಕಾರಿ ಸ್ನೇಹಲ್​ ಆರ್​., ಜಿ.ಪಂ. ಸಿಇಒ ಭುವನೇಶ ಪಾಟೀಲ, ಪೊಲೀಸ್​ ವರಿಷ್ಠಾ-ಧಿಕಾರಿ ಗುಂಜನ್​ ಆರ್ಯ ವೇದಿಕೆಯಲ್ಲಿದ್ದರು.