felicitation ಹುಬ್ಬಳ್ಳಿಯಲ್ಲಿ ಶುಕ್ರವಾರ ಬಸವರಾಜ ಹೊರಟ್ಟಿ ಅಭಿನಂದನೆ ಸಮಾರಂಭದ ಮಾಹಿತಿ ನೀಡಿದ ಶಾಸಕ ಎನ್.ಎಚ್. ಕೋನರಡ್ಡಿ, ಶಂಕರಣ್ಣ ಮುನವಳ್ಳಿ, ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ಡಾ. ವಿ.ಎಸ್.ವಿ. ಪ್ರಸಾದ ಇತರರು ಇದ್ದರು.
- ಹುಬ್ಬಳ್ಳಿ ನೆಹರು ಮೈದಾನದಲ್ಲಿ ಆಯೋಜನೆ
- ಸಾಧನೆಗಳನ್ನು ಮೆಲಕು ಹಾಕುವ ಸಂದರ್ಭ
- ಅಭಿನಂದನಾ ಸಮಿತಿ ವತಿಯಿಂದ ಕಾರ್ಯಕ್ರಮ
ಹುಬ್ಬಳ್ಳಿ: felicitation ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸತತ ಎಂಟು ಬಾರಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ, ಪರಿಷತ್ ಸದಸ್ಯರಾಗಿ 45 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸನ್ಮಾನ ಸಮಾರಂಭವನ್ನು ಡಿ. 13ರಂದು ಸಂಜೆ 4ಕ್ಕೆ ನಗರದ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಅಭಿಮಾನಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ, ಸಚಿವರಾಗಿ ಸಾವಿರಾರು ಶಿಕ್ಷಕರ ಸಮಸ್ಯೆ ಪರಿಹಾರ ಮಾಡಿದ್ದಾರೆ. ವಿವಿಧ ಇಲಾಖೆಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡದ ಜನರು, ಶಿಕ್ಷಕರಿಗೆ ಅವರ ಬಗ್ಗೆ ಅಪಾರ ಪ್ರೀತಿ, ಗೌರವ ಇದೆ. 20ಸಾವಿರಕ್ಕೂ ಹೆಚ್ಚು ಜನ ಇಲ್ಲಿದಂಲೇ ಬರಲಿದ್ದಾರೆ ಎಂದರು.
ಸಿಎಂ ಉದ್ಘಾಟನೆ:
ಅಂದು ಸಂಜೆ 4ಕ್ಕೆ ನಡೆಯುವ ಅದ್ದೂರಿ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸುವರು.
ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್.ಕೆ. ಪಾಟೀಲ, ಡಾ. ಎಂ.ಸಿ. ಸುಧಾಕರ, ಮಧು ಬಂಗಾರಪ್ಪ, ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಶಾಸಕ ಮಹೇಶ ಟೆಂಗಿನಕಾಯಿ, ಅಭಿನಂದನಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ರಾಜಣ್ಣ ಕೊರವಿ, ವಿಧಾನ ಪರಿಷತ್ ಸದಸ್ಯ ಪ್ರದಿಪ ಶೆಟ್ಟರ್ ಮಾತನಾಡಿದರು.