ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಿರ್ಮಿಸಿರುವ ವೇದಿಕೆಯನ್ನು ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ (horatti) ಅಭಿನಂದನಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಗುರುವಾರ ವೀಕ್ಷಿಸಿದರು.
ಹುಬ್ಬಳ್ಳಿ: ಸತತ 8 ಬಾರಿ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಬಸವರಾಜ ಹೊರಟ್ಟಿ (horatti) ಅವರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೇ 45 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಯ ನೆಹರು ಮೈದಾನದಲ್ಲಿ ಡಿ. 13ರಂದು ಸಂಜೆ 4ಕ್ಕೆ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ತಿಳಿಸಿದರು.
ನಗರದ ನೆಹರು ಮೈದಾನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಸಾನ್ನಿಧ್ಯ ವಹಿಸುವರು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸ್ಮಾನಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸುವರು ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಸಚಿವರಾದ ಎಚ್.ಕೆ. ಪಾಟೀಲ, ಡಾ.ಎಂ.ಸಿ. ಸುಧಾಕರ, ಮಧು ಬಂಗಾರಪ್ಪ, ಶಿವಾನಂದ ಪಾಟೀಲ, ಮಂಕಾಳ ವೈದ್ಯ, ಆರ್.ವಿ. ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆಎಲ್‌ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಉಪ ಸಭಾಪತಿ ಪ್ರಾಣೇಶ ಸೇರಿದಂತೆ ಬಹಳಷ್ಟ ನಾಯಕರ ಉಪಸ್ಥಿತಿ ಇರಲಿದೆ ಎಂದರು.