ಹುಬ್ಬಳ್ಳಿಯ ಘಂಟಿಕೇರಿಯಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು. ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ತಹಸೀಲ್ದಾರ ಮಹೇಶ ಗಸ್ತೆ ಇತರರಿದ್ದರು.  
ಧಾರವಾಡ

ಜನರ ಮನೆ ಬಾಗಿಲಿಗೆ ಸರ್ಕಾರಿ ಯೋಜನೆ ತಲುಪಲಿ

ಪ್ರಜಾ ಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ : ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ ಇಲಾಖೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಪ್ರಜಾ ಸೇವಾ ಇಲಾಖೆಯಿಂದ ಜನರಿಗೆ ಅನುಕೂಲವಾಗಿದೆ. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳು ತಲುಪಬೇಕು ಎಂದು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಘಂಟಿಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯುಲಯದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಬೃಹತ್ ಪ್ರಜಾ ಸೇವಾ ಆಂದೋಲನ ಸಭೆ ಉದ್ಘಾಟಿಸಿ, ಅವರು ಮಾತನಾಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲು ಪ್ರಜಾ ಸೇವಾ ಇಲಾಖೆ ಆರಂಭಿಸಿದ್ದಾರೆ. ಒಂದೇ ಸೂರಿನಡಿ ಸರ್ಕಾರದ ಎಲ್ಲ ಇಲಾಖೆಗಳ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶವನ್ನು ಪ್ರಜಾ ಸೇವಾ ಇಲಾಖೆ ಹೊಂದಿದೆ ಎಂದು ತಿಳಿಸಿದರು.

ಪ್ರಜಾ ಸೇವಾ ಇಲಾಖೆ ಆರಂಭಕ್ಕೂ ಮುನ್ನ ಜನರು ವಿವಿಧ ಇಲಾಖೆಗಳಿಗೆ ಪದೇ ಪದೆ ಅಲೆದಾಡುವ ಪರಿಸ್ಥಿತಿ ಇತ್ತು. ಇದೀಗ, ಒಂದೇ ವೇದಿಕೆಯಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸಗಳಾಗುತ್ತಿವೆ ಎಂದರು.

ಅಧಿಕಾರಿಗಳು ಜನರ ಸೇವೆಗಾಗಿ ಇರುವವರು, ಜನರ ಸೇವಕರು ಎಂದು ಮನವರಿಕೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಉತ್ತಮ ರೀತಿಯಲ್ಲಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಸೂಚಿಸಿದರು.

ಆಡಳಿತದಲ್ಲಿ ಪಾರದರ್ಶಕತೆ ತರಲು ಯತ್ನಿಸಲಾಗುತ್ತಿದೆ. ಕಾನೂನಿನ ಅಡಿಯಲ್ಲಿ ಎಲ್ಲರೂ ಸರಿ ಸಮಾನರು. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂದು ಹೇಳಿದರು.

ಮನೆಗಳಿಗಾಗಿ ಜನರಿಂದ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ಮನೆಗಳು ಮಂಜೂರಾಗಲಿವೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳು, ಆಟೋ ರಿಕ್ಷಾ ವಿತರಣೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಪ್ರಸಾದ ಅಬ್ಬಯ್ಯ ಅವರನ್ನು ಶೃಂಗರಿಸಿದ ಚಕ್ಕಡಿಯಲ್ಲಿ ಪೂರ್ಣಕುಂಭದ ಮೆರವಣಿಗೆಯೊಂದಿಗೆ ವೇದಿಕೆಗೆ ಕರೆತರಲಾಯಿತು.

ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಭಗವಂತ ಗಸ್ತೆ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಫಡ್ನೇಶಿ, ವಲಯ ಅರಣ್ಯಾಧಿಕಾರಿ ಆರ್.ಎಸ್. ಉಪ್ಪಾರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಂಗಮೇಶ ಬಂಗಾರಿಮಠ, ತೋಟಗಾರಿಕೆ ಇಲಾಖೆಯ ಅಧಿಕಾರಿ ಅಜೀತಕುಮಾರ ಮಸಾಲ್ಡಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪಾಲಿಕೆ ಸದಸ್ಯರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.