minimum wage ಹುಬ್ಬಳ್ಳಿಯಲ್ಲಿ ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ ಅವರು ಅಹೋರಾತ್ರಿ ಧರಣಿ ಕುರಿತ ಪ್ರಚಾರ ಫಲಕಗಳನ್ನು ಬಿಡುಗಡೆ ಮಾಡಿದರು. ಗಂಗಾಧರ ಬಡಿಗೇರ, ಲಕ್ಷ್ಮೀ ಇದ್ದರು.
ಹುಬ್ಬಳ್ಳಿ: minimum wage ಪರಿಷ್ಕೃತ ಕನಿಷ್ಠ ವೇತನ ಕೂಡಲೇ ಪಾವತಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೆ. 2ರಿಂದ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯಮಟ್ಟದ ಪ್ರತಿಭಟನೆಯ ಪ್ರಚಾರ ಲಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ರಾಜ್ಯದ ವಿವಿಧೆಡೆಯಿಂದ ಸುಮಾರು 5 ಸಾವಿರ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸುವರು. ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿ ಕನಿಷ್ಠ ವೇತನ ಜಾರಿಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಕಾರ್ಮಿಕರ ಹೋರಾಟದ ಫಲವಾಗಿ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೆಲವರ ಒತ್ತಡಕ್ಕೆ ಮಣಿದು ಪುನಃ ಪರಿಶೀಲನಾ ಸಮಿತಿ ರಚಿಸಿರುವ ರಾಜ್ಯ ಸರ್ಕಾರವು ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕೂಡಲೇ ಸಮಿತಿ ರಚನೆ ನಿರ್ಧಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಪಂಚ ಗ್ಯಾರಂಟಿಗಳನ್ನು ನೀಡಿರುವ ರಾಜ್ಯ ಸರ್ಕಾರಕ್ಕೆ ಪರಿಷ್ಕೃತ ಕನಿಷ್ಠ ವೇತನ ಜಾರಿ ಮಾಡುವುದರಿಂದ ಯಾವುದೇ ಹೊರೆಯಾಗುವುದಿಲ್ಲ. ಬಜೆಟ್ನಲ್ಲಿ ಹೊಂದಾಣಿಕೆ ಮಾಡಬಹುದು. ಇದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪರಿಗಣಿಸಬೇಕು ಎಂದರು.
ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ವಿವಿಧ ಕ್ಷೇತ್ರದಿಂದ ರಾಜ್ಯದ ವಿವಿಧ ಕಡೆಗಳಿಂದ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸುವರು. ಧಾರವಾಡ ಜಿಲ್ಲೆಯಿಂದ ಸುಮಾರು 500 ಜನ ಬೆಂಗಳೂರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ಹೇಳಿದರು.