ರೈತರ (Farmer) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಶನಿವಾರ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಈಶ್ವರಗೌಡ ಪಾಟೀಲ, ಬಸವರಾಜ ಕುಂದಗೋಳಮಠ, ವೆಂಕಟೇಶ ಕಾಟವೆ ಹಾಗೂ ಇತರರು ಪಾಲ್ಗೊಂಡಿದ್ದರು.
- ಚಕ್ಕಡಿಯಲ್ಲಿ ತೆರಳಿದ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು.
- ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದೆ.
- ಕುರ್ಚಿ ಕಚ್ಚಾಟ ಬಿಟ್ಟು ರೈತರ ಸಮಸ್ಯೆ ಬಗೆಹರಿಸಲಿ.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ ಕಚೇರಿಯವರೆಗೆ ಎತ್ತಿನ ಚಕ್ಕಡಿಯಲ್ಲಿ ತೆರಳಿದ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು, ಮಾರ್ಗದುದ್ದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಭಾವಚಿತ್ರಗಳಿಗೆ ಕಪ್ಪುಮಸಿ ಬರೆದು, ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ರೈತರ ಸಮಸ್ಯೆಗಳನ್ನು ಬಗೆಹರಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಸಿಎಂ ಕುರ್ಚಿಗಾಗಿ ಸರ್ಕಸ್ ನಡೆಸಿದ್ದಾರೆ. ಕೃಷಿ ಸಚಿವರು ತಮಗೂ ರಾಜ್ಯದ ರೈತರಿಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ರೈತರಿಗೆ ನೀಡುತ್ತಿದ್ದ ವಾರ್ಷಿಕ 4 ಸಾವಿರ ರೂ.ಗಳನ್ನೂ ರೈತರ ಖಾತೆಗೆ ಜಮಾ ಮಾಡಿಲ್ಲ. ಈ ಮೊದಲು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಸಂದರ್ಭದಲ್ಲಿಯೂ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿದ್ದರು. ಬಿಜೆಪಿ ಜಾರಿಗೊಳಿಸಿದ್ದ ರೈತರಪರ ಯೋಜನೆಗಳನ್ನೆಲ್ಲ ಸ್ಥಗಿತಗೊಳಿಸಿದೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇನ್ನಾದರೂ ಕುರ್ಚಿ ಕಚ್ಚಾಟ ಬಿಟ್ಟು ರೈತರ ಸಮಸ್ಯೆ ಬಗೆಹರಿಸಲಿ ಎಂದು ಒತ್ತಾಯಿಸಿದರು.
ಡಿ. 8 ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು. ಸರ್ಕಾರದ ಧೋರಣೆ ಖಂಡಿಸಿ ಡಿ. 2 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ತಹಸೀಲ್ದಾರರ ಮುಖಾಂತರ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.
ರೈತ ಮೋರ್ಚಾ ಮಹಾನಗರ ಜಿಲ್ಲಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮುಖಂಡರಾದ ಶಶಿಮೌಳಿ ಕುಲಕರ್ಣಿ, ವಸಂತ ನಾಡಜೋಶಿ, ಬಸವರಾಜ ಗರಗ, ಬಸವರಾಜ ಕುಂದಗೋಳಮಠ, ವೆಂಕಟೇಶ ಕಾಟವೆ, ನಾಗರತ್ನ ಬಳ್ಳಾರಿ, ರಾಜು ಕಾಳೆ, ಮಂಜುನಾಥ ಕಾಟಕರ, ವೀರಯ್ಯಸ್ವಾಮಿ ಸಾಲಿಮಠ, ಮಂಜುನಾಥ ನೀರಲಕಟ್ಟಿ, ಸೇರಿದಂತೆ ಹಲವರಿದ್ದರು.