hijab ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅನುಮತಿ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. 
ಧಾರವಾಡ

hijab ಹಿಜಾಬ್ ವಿರುದ್ಧ ಶ್ರೀರಾಮ ಸೇನೆ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ರಾಜಕೀಯ ಹಿತಾಸಕ್ತಿಗಾಗಿ ವಿದ್ಯಾರ್ಥಿಗಳಲ್ಲಿ ಒಡಕು
  • ಕಾಂಗ್ರೆಸ್ ಸರ್ಕಾರ ಇಡೀ ಶಿಕ್ಷಣ ವ್ಯವಸ್ಥೆಯನ್ನು ಬಲಿ ಕೊಡುತ್ತಿದೆ
  • ವಿದ್ಯಾರ್ಥಿಗಳಲ್ಲಿ ವೈಮನಸ್ಸು ಮೂಡಿಸುವ ಕಾರ್ಯ
ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹಿಜಾಬ್ ಧರಿಸಿದ್ದ ಭಾವಚಿತ್ರಗಳನ್ನು ಪ್ರದರ್ಶಿಸಿ ಅಣಕಿಸಿದರು.
2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಜಾರಿಗೊಳಿಸಿದ್ದ ಸಮವಸ್ತ್ರ ಸಂಹಿತೆ ನಿಗದಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯುವ ಮೂಲಕ ಮುಸ್ಲಿಂ ಸಮುದಾಯದ ಓಲೈಕೆಗೆ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಮೋದ ಮುತಾಲಿಕ ಮಾತನಾಡಿ, ಮುಸ್ಲಿಂರ ಮತಬ್ಯಾಂಕ್​ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ಶಿಕ್ಷಣ ವ್ಯವಸ್ಥೆಯನ್ನು ಬಲಿ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮವಸ್ತ್ರ ಸಂಹಿತೆ ಕಾಯ್ದೆ ಸುಪ್ರೀಂ ಕೋರ್ಟ್​ನಲ್ಲಿದೆ. ಆದರೂ, ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ಈ ಕಾಯ್ದೆ ಹಿಂಪಡೆಯುವ ಮೂಲಕ ಕಾನೂನು ಉಲ್ಲಂಘನೆ ಮಾಡಿದೆ. ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಮವಸ್ತ್ರದ ಮಹತ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗೊತ್ತಿಲ್ಲ. ಅವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ವಿದ್ಯಾರ್ಥಿಗಳಲ್ಲಿ ಒಡಕು ಮೂಡಿಸುತ್ತಿದ್ದಾರೆ.
ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಹೋದರೆ, ಹಿಂದೂ ವಿದ್ಯಾರ್ಥಿಗಳು ಸಹ ಕೇಸರಿ ವಸ್ತ್ರ ಧರಿಸಿಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.
ಮುಸ್ಲಿಂ ಸಮುದಾಯಕ್ಕೆ 600 ಕೋಟಿ ರೂ. ನೀಡಿರುವ ಕಾಂಗ್ರೆಸ್ ಸರ್ಕಾರ, ಇದೀಗ ವಿದ್ಯಾರ್ಥಿಗಳಲ್ಲಿ ವೈಮನಸ್ಸು ಮೂಡಿಸುವ ಕಾರ್ಯ ಮಾಡುತ್ತಿದೆ ಎಂದು ದೂರಿದರು.
ಶ್ರೀರಾಮ ಸೇನೆಯ ಮಂಜುನಾಥ ಕಾಟಕರ, ಗುಣಧರ ದಡೋತಿ, ಪ್ರವೀಣ ಮಾಳದಕರ, ರಘು ಯಲ್ಲಕ್ಕನವರ ಹಾಗೂ ಇತರರಿದ್ದರು.