ಧಾರವಾಡ: ಪ್ರಸ್ತುತ ಬೇಸಿಗೆ ಅವಧಿಯಲ್ಲಿ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯೆ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚಿಸಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಅವರು ಮಾತನಾಡಿದರು.
ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದೆ. ಸಾರ್ವಜನಿಕರು ಕೃಷಿಯೇತರ ಚಟುವಟಿಕೆಗಳಿಗೆ ಕಾಲುವೆ ನೀರನ್ನು ಬಳಸದಂತೆ ತಡೆಯಲು ನೋಡಲ್ ಅಧಿಕಾರಿಗಳ ತಂಡ ನಿಗಾ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಮತ್ತು ಜಾನುವಾರುಗಳಿಗೆ ಮೇವಿನ ಅಭಾವ ಆಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದರು.