ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿದರು.
ಧಾರವಾಡ: ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಸಮಸ್ಯೆಗಳು ಮುಖ್ಯಮಂತ್ರಿಗಳ ಕಚೇರಿಗೆ ಹೋಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಧಿಕಾರಿಗಳು ತಂಡವಾಗಿ ಕಾರ್ಯ ನಿರ್ವಹಿಸಬೇಕು. ಕಾಲಮಿತಿಯಲ್ಲಿ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು. ವಿವಿಧ ಯೋಜನೆಗಳಿಗೆ ದೊರೆತ ಅನುದಾನ ಹೇಗೆ ಬಳಸಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ನೈಸಗಿರ್ಕ ವಿಕೋಪಗಳು ಸಂಭವಿಸುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳಡಿ ಸಾರ್ವಜನಿಕರಿಗೆ ವಿತರಿಸಿದ ವಾಹನಗಳು ಯಾವ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬುದನ್ನು ಪರಿಶೀಲಿಸಬೇಕು ಎಂದರು.
ಸರ್ಕಾರಿ ನೌಕರರು ಕರ್ತವ್ಯ ಆ್ಯಪ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಬೆಳಗ್ಗೆ 10 ಗಂಟೆ ಹಾಗೂ ಸಂಜೆ 5 ಗಂಟೆಯ ನಂತರ ಹಾಜರಾತಿ ನಮೂದಿಸಬೇಕು. ಅಧಿಕಾರಿಗಳು 24*7 ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯಲ್ಲಿ ಸಾರ್ವಜನಿಕರನ್ನು ತಾವು ವಾಸಿಸುವ ಮನೆಗಳಿಗೆ ಕರೆಸಿಕೊಂಡು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಾರದು. ಜಿಲ್ಲಾ ಮಟ್ಟ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕರ್ತವ್ಯ ಆ್ಯಪ್ ಮೂಲಕ ಹಾಜರಾತಿ ನಮೂದಿಸುವಂತೆ ಸೂಚಿಸಬೇಕು ಎಂದರು.
ಜಿ.ಪಂ. ಸಿಇಒ ಭುವನೇಶ ಪಾಟೀಲ ಮಾತನಾಡಿ, ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರದ ನಿಯಮಗಳಡಿ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಗುಣಮಟ್ಟದ ಕಾಮಗಾರಿಗಳು ನಡೆಯಲು ಆದ್ಯತೆ ನೀಡಬೇಕು. ಪ್ರತಿ ಶಾಲೆ, ಕಾಲೇಜುಗಳಿಗೆ ಖುದ್ದಾಗಿ ಭೇಟಿ ನೀಡಲಾಗುವುದು. ಶಾಲಾ ಕಟ್ಟಡಗಳು ಹಾಗೂ ಸರ್ಕಾರಿ ಕಟ್ಟಡಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪ ಅರಣ್ಯ ಸಂರಣಾಧಿಕಾರಿ ಶೇಖ್ ಅಬ್ದುಲ್ಅಲಿಮ್ ಸಿದ್ದಿಕಿ, ಜಿ.ಪಂ. ಉಪ ಕಾರ್ಯದಶಿರ್ ಮಲ್ಲಿಕಾರ್ಜುನ ತೊದಲಬಾಗಿ ವೇದಿಕೆಯಲ್ಲಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.