ಹುಬ್ಬಳ್ಳಿ: ರೈತರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ನ್ಯಾಯಸಮ್ಮತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು, ಧಾರವಾಡದಲ್ಲಿ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರೈತರ ಪ್ರತಿಭಟನೆಯನ್ನು ಗೌರವಿಸುತ್ತೇವೆ. ಆದರೆ, ಈ ಪ್ರತಿಭಟನೆಯಿಂದ ವ್ಯಾಪಾರಸ್ಥರು, ಉದ್ದಿಮೆದಾರರು ಹಾಗೂ ಸರಕು ಸಾಗಣೆಗೆ ತೊಂದರೆಯಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೆಸಿಸಿಐ ಅಧ್ಯಕ್ಷ ಸಂದೀಪ ಬಿಡಸಾರಿಯಾ ಮನವಿ ಮಾಡಿದರು.
ನಮ್ಮ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಉಪಾಧ್ಯಕ್ಷರಾದ ಸಿದ್ದೇಶ್ವರ ಕಮ್ಮಾರ, ವೀರಣ್ಣ ಕಲ್ಲೂರ ಭಾಗವಹಿಸಿದ್ದರು. ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿದ್ದ ಮಾಜಿ ಅಧ್ಯಕ್ಷರಾದ ಶಂಕರಣ್ಣ ಮುನವಳ್ಳಿ, ವಸಂತ ಲದವಾ ಅವರೂ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆಗಳನ್ನು ವಿವರಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಒಳ್ಳೆಯದಾಗುವಂತಹ ನಿರ್ಧಾರಗಳನ್ನು ಪ್ರಕಟಿಸಬೇಕು ಎಂದು ಗೌರವ ಕಾರ್ಯದರ್ಶಿ ಪ್ರಕಾಶ ಶೃಂಗೇರಿ ವಿನಂತಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹು-ಧಾ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರಿಗೂ ಮನವಿ ಪತ್ರ ರವಾನಿಸಿದರು.