ಹನೂರು: ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 ರಿಂದ 5ನೇ ತರಗತಿಯವರೆಗೆ ಸೀಮಿತಗೊಳಿಸಿರುವುದನ್ನು ಹಿಂಪಡೆದು ಬಡ್ತಿ ನೀಡುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ಸರ್ಕಾರಿ ನೌಕರರ ವೃತ್ತಿಯಲ್ಲಿ ಮುಂಬಡ್ತಿ ಹೊಂದುವುದು ಸಹಜ ಪ್ರಕ್ರಿಯೆ. ಆದರೆ 2017ರಿಂದ ನೂತನ ಪದವೀಧರ ಶಿಕ್ಷಕರ ನೇಮಕಾತಿಯ ನಂತರದಲ್ಲಿ ಹೊಸ ವೃಂದ ನೇಮಕಾತಿ ನಿಯಮದಂತೆ 1 ರಿಂದ 5ನೇ ತರಗತಿವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸೀಮಿತಗೊಳಿಸಿರುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ಶಿಕ್ಷಕರಿಗೆ ಅನ್ಯಾಯವಾದಂತಾಗಿದೆ. ಹಾಗಾಗಿ 2017ರ ಹೊಸ ವೃಂದ ಹಾಗೂ ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವನ್ವಯಗೊಳಿಸಬಾರದು. ಸರ್ಕಾರ ಈ ಬಗ್ಗೆ ಮನದಟ್ಟು ಮಾಡಿಕೊಂಡು ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಹೊಸ ವೃಂದ ನೇಮಕಾತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗಿದೆ. ಆದ್ದರಿಂದ, ಸರ್ಕಾರ ಅನ್ಯಾಯ ಸರಿಪಡಿಸಬೇಕು. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಹಸೀಲ್ದಾರ್ ಗುರುಪ್ರಸಾದ್ ಮಾತನಾಡಿ, ಸಲ್ಲಿಸಿರುವ ಮನವಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಬಿಇಒ ಗುರುಲಿಂಗಯ್ಯ ಮಾತನಾಡಿ, ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿವೆ. ಈ ಬಗ್ಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲು ಅಗತ್ಯ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಪದವೀಧರ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಸಂಘದ ಪದಾಧಿಕಾರಿಗಳು ಇದ್ದರು.