ಜಿಲ್ಲೆ

ವಿಕೋಪ ಎದುರಿಸಲು ಅಧಿಕಾರಿಗಳಲ್ಲಿ ಸಮನ್ವಯತೆ; ವಿಪತ್ತು ನಿರ್ವಹಣೆ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

reportermng

ಮಂಗಳೂರು: ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯತಂತ್ರ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಯಾವುದೇ ರೀತಿಯ ವಿಕೋಪಗಳು ಎದುರಾದರೂ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಭಿಪ್ರಾಯಪಟ್ಟರು.
ದ.ಕ ಜಿಲ್ಲಾಡಳಿತ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಯಾವುದೇ ವಿಕೋಪಗಳನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ, ವಿಕೋಪಗಳ ಸಂದರ್ಭದಲ್ಲಿ ಅಗತ್ಯ ಇಲಾಖೆಗಳು ತಂಡದಂತೆ ಯೋಜನೆ ರೂಪಿಸಿದರೆ ಅದರಂತೆ ಕಾರ್ಯಪ್ರವೃತ್ತರಾದಾಗ ಮಾತ್ರ ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದರು. ಕಾರ್ಯಗಾರಕ್ಕೆ ನಿಜವಾದ ಅರ್ಥ ಬರಬೇಕೆಂದರೆ ಅಧಿಕಾರಿಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು. ತಮ್ಮಲ್ಲಿನ ಉಪಯುಕ್ತ ವಿಚಾರ, ಮಾರ್ಗಸೂಚಿ ಹಾಗೂ ಯೋಜನೆಗಳನ್ನು ಇತರರೊಂದಿಗೆ ಹಂಚಿಕೊಂಡು, ಇತರರ ಹೊಸ ವಿಚಾರಗಳನ್ನು ಕಲಿತುಕೊಳ್ಳಬೇಕು. ಆ ಮೂಲಕ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಒಗ್ಗಟ್ಟಿನ ಪ್ರದರ್ಶನ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮೈಸೂರು ಆಡಳಿತ ತರಬೇತಿ ಸಂಸ್ಥೆಯ ನಿರ್ದೇಶಕ ಚಂದ್ರನಾಯಕ್, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ವೆಂಕಟೇಶ್ ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಮಂಗಳೂರು ಉಪ ತಹಸೀಲ್ದಾರ್ ಜಯಂತ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.