ವಿಜಯಪುರ: ಶಾಲೆ, ಅಂಗನವಾಡಿಗಳು ಹಾಗೂ ವಸತಿ ನಿಲಯಗಳ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ನೀಡಬೇಕು. ಒಂದು ವೇಳೆ ಗುತ್ತಿಗೆದಾರರು ಕಳಪೆ ಮಟ್ಟದ ಆಹಾರ ಪೂರೈಸಿದರೆ ನಮ್ಮ ಕಾರ್ಯಾಲಯಕ್ಕೆ ಮಾಹಿತಿ ನೀಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಸಿಂದಗಿ ಹಾಗೂ ದೇವರಹಿಪ್ಪರಗಿ ತಾಲೂಕು ವ್ಯಾಪ್ತಿಯ ವಸತಿ ನಿಲಯ ಅಂಗನವಾಡಿ, ಶಾಲೆಗಳಿಗೆ ಇತ್ತೀಚೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.
ಆರಂಭದಲ್ಲಿ ತಿಳಗೋಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಂತರ ದೇವರ ಹಿಪ್ಪರಿಗಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿ ಬಳಿಕ ಎಸ್‌ಎಸ್‌ಎಲ್‌ಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಭಯ ಮುಕ್ತವಾಗಿ ಪರೀಕ್ಷೆ ಎದುರಿಸುವುದು ಹೇಗೆ ಎನ್ನುವ ಕುರಿತು ಮಾತನಾಡಿದ ಸಂಗಮೇಶ ಬಬಲೇಶ್ವರ, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶದಲ್ಲಿ ಸುಧಾರಣೆ ಕಂಡುಕೊಳ್ಳುವಂತೆ ಸೂಚನೆ ನೀಡಿದರು.
ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ, ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು ಮತ್ತಿತರರಿದ್ದರು.