ಮಡಿಕೇರಿ: ಆ.೧೫ ರಂದು ಸಂಭ್ರಮ ಮತ್ತು ಸಡಗರದೊಂದಿಗೆ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು. ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ಚಾಚುತಪ್ಪದೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸ್ವಾಗತ ಸಮಿತಿಯವರು ಶಿಷ್ಟಾಚಾರದಂತೆ ಆಹ್ವಾನ ಪತ್ರ ತಲುಪಿಸುವುದು ಮತ್ತಿತರ ಕಾರ್ಯ ನಿರ್ವಹಿಸಬೇಕು. ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ವೇದಿಕೆ ಸಮಿತಿಯವರು ಕಳೆದ ಬಾರಿಯಂತೆ ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವುದು ಮತ್ತಿತರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.
ಕವಾಯತನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಆಯೋಜಿಸುವುದು, ರಿಹರ್ಸಲ್ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ಸಂಬಂಧಪಟ್ಟ ಸಮಿತಿಯವರು ವ್ಯವಸ್ಥೆ ಮಾಡಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ಗೌರವಿಸುವುದು, ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಡಿವೈಎಸ್‌ಪಿ ಜಗದೀಶ್ ಮಾತನಾಡಿ, ಕವಾಯತು ಸಂಬಂಧಿಸಿದಂತೆ ಪೊಲೀಸ್, ಎನ್‌ಸಿಸಿ, ಅರಣ್ಯ, ಗೃಹರಕ್ಷಕ ದಳ ಹೀಗೆ ವಿವಿಧ ಕವಾಯತುಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಮಾತನಾಡಿ, ೧೪ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ರಿಹರ್ಸಲ್ ನಡೆಯಲಿದ್ದು, ಆ ಸಂದರ್ಭದಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಲಹೆ ಮಾಡಿದರು.
ಸಭೆಯಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನ ಎಂ.ಶೇಕ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.