ಮಡಿಕೇರಿ: ಆ.೧೫ ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಹೆಚ್ಚಿನ ಮಳೆ ಇರುವುದರಿಂದ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು. ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸುವ ಸಂಬಂಧ ಎಎಸ್‌ಐ ಅವರಿಂದ ಅನುಮತಿ ಪಡೆಯುವಂತೆ ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಳೆ ಕಡಿಮೆಯಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಬೇರೆ ಬೇರೆ ಶಾಲೆಗಳಿಗೂ ಅವಕಾಶ ಮಾಡಬೇಕು. ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ವೇದಿಕೆ ಸಮಿತಿಯವರು ಕಳೆದ ಬಾರಿಯಂತೆ ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವುದು ಮತ್ತಿತರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕವಾಯತನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಆಯೋಜಿಸಬೇಕು. ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ಸಂಬಂಧಪಟ್ಟ ಸಮಿತಿಯವರು ವ್ಯವಸ್ಥೆ ಮಾಡುವಂತೆ ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗೌರವಿಸಬೇಕು. ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಕವಾಯತು ಸಂಬಂಧಿಸಿದಂತೆ ಪೊಲೀಸ್, ಎನ್‌ಸಿಸಿ, ಅರಣ್ಯ, ಗೃಹರಕ್ಷಕ ದಳ ಹೀಗೆ ವಿವಿಧ ಕವಾಯತುಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ ಮಾತನಾಡಿ, ವಿವಿಧ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ರಿಹರ್ಸಲ್ ನಡೆಯಲಿದ್ದು, ಆ ಸಂದರ್ಭದಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ವಿವಿಧ ಉಪ ಸಮಿತಿಗಳಿಗೆ ವಹಿಸಿರುವ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಲಹೆ ಮಾಡಿದರು.
ಸಭೆಯಲ್ಲಿ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಸಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಪಿಆರ್‌ಇಡಿ ಇಇ ಸುರೇಶ್ ಕುಮಾರ್, ಪೌರಾಯುಕ್ತರಾದ ವಿಜಯ್ ಇತರರು ಇದ್ದರು.