ವಿಜಯವಾಣಿ ಸುದ್ದಿಜಾಲ ಧಾರವಾಡ
ಬೀಜ, ರಸಗೊಬ್ಬರ, ವಿಮೆ, ಪರಿಹಾರ, ಕೃಷಿ ಪರಿಕರಗಳ ಸಹಾಯಧನ ಸೇರಿ ಸರ್ಕಾರದ ಎಲ್ಲ ಸವಲತ್ತು, ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಜಿಲ್ಲಾಡಳಿತ ಸದಾ ಸಿದ್ಧ. ಬೀಜ, ರಸಗೊಬ್ಬರ ವಿತರಣೆಯಲ್ಲಿ ಇಲಾಖೆ ಅಥವಾ ಸಹಕಾರಿ, ಖಾಸಗಿ ವ್ಯಾಪಾರಸ್ಥರಿಂದ ತೊಂದರೆ ಆದಲ್ಲಿ, ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಅಥವಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ದೂರು ನೀಡಿ. ದೂರುದಾರರ ಮಾಹಿತಿ ಗೌಪ್ಯವಾಗಿಟ್ಟು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮುಂಗಾರು ಪೂರ್ವ ಸಿದ್ಧತೆಗಳ ಕುರಿತ ಜಿಲ್ಲೆಯ ರೈತ ಮುಖಂಡರು ಹಾಗೂ ರೈತ ಸಂಟನೆಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಾಮಾನ್ಯವಾಗಿ ಜೂನ್ದಲ್ಲಿ ಬಿತ್ತನೆ ಆರಂಭವಾಗುತ್ತದೆ. ಆದರೆ ಮೇ ತಿಂಗಳ ಮಧ್ಯದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದ್ದರಿಂದ ಜೂನ್ ಪೂರ್ವದಲ್ಲಿ ಬಿತ್ತನೆ ಆರಂಭಿಸಿದ್ದಾರೆ. ಜಿಲ್ಲಾಡಳಿತ ಪೂರ್ವಯೋಚಿತವಾಗಿ ಜಿಲ್ಲೆಯ ಬಿತ್ತನೆ ಪ್ರದೇಶಕ್ಕೆ ಅನುಗುಣವಾಗಿ ಹೆಚ್ಚುವರಿ ಬೀಜ, ಗೊಬ್ಬರದ ದಾಸ್ತಾನು ಮಾಡಿದೆ. ರೈತರು ಗಾಳಿಸುದ್ದಿಗಳಿಗೆ ಕಿವಿಗೊಡದೆ ಸಮಾಧಾನದಿಂದ ಅಗತ್ಯ ಬೀಜ, ರಸಗೊಬ್ಬರ ಪಡೆಯಬೇಕು ಎಂದರು.
ರೈತರ ಬೇಡಿಕೆ ಅನುಸಾರ ನಾಳೆಯಿಂದ ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ ಬೆಳಗ್ಗೆ 9 ಗಂಟೆಯಿಂದ ಬೀಜಗಳನ್ನು ವಿತರಿಸಲಾಗುತ್ತದೆ. ಇದಕ್ಕೆ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ಬೇರೆ ಇಲಾಖೆಗಳಿಂದ ನಿಯೋಜಿಸಿ, ಬಂದೋಬಸ್ತ್ ನೀಡಲಾಗುತ್ತದೆ. ಈ ಕುರಿತು ಜಂಟಿ ನಿರ್ದೇಶಕರು ವ್ಯವಸ್ಥಿತ ಕ್ರಮವಹಿಸುತ್ತಾರೆ. ತಡರಾತ್ರಿ ಆದರೂ ಬ್ಯಾಂಕ್ಗಳು, ರೈತ ಸಂಪರ್ಕ ಕೇಂದ್ರದ ಆಥಿರ್ಕ ಕಾರ್ಯಗಳಿಗೆ ಸಹಕಾರ ನೀಡಬೇಕು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ರೈತ ಸಂಪರ್ಕ ಕೇಂದ್ರಗಳಿರುವ ಬ್ಯಾಂಕ್ ಶಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.
ರಸಗೊಬ್ಬರ ವಿತರಣಾ ಕೇಂದ್ರಗಳನ್ನು ಹೆಚ್ಚಿಸಲು ಕ್ರಮವಹಿಸಲಾಗುವುದು. ಆಯಾ ಗ್ರಾಮಗಳ ಸಹಕಾರಿ ಸಂ, ಸಂಸ್ಥೆಗಳು ಕಷಿ ಇಲಾಖೆ ಹಾಗೂ ಕಷಿ ವಿಜ್ಞಾನ ಕೇಂದ್ರ ನೀಡುವ ಅಗತ್ಯ ತರಬೇತಿ ಮತ್ತು ಪ್ರಮಾಣ ಪತ್ರ ಪಡೆಯಲಿ. ಅಂತಹ ಸೊಸೆಟಿಗಳಿಗೆ ಪರವಾನಿಗೆ ನೀಡುತ್ತೇವೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣ ಕುಮಾರ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಪ್ರಭುದೇವ ಎನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ ಭದ್ರಣ್ಣನವರ, ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಇಲಾಖೆ ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಡಾ ಸಂದೀಪ ಆರ್.ಜಿ., ಇತರರು ಇದ್ದರು.