ಉಡುಪಿ: ದೇಶದ ಭವಿಷ್ಯವು ತರಗತಿಯೊಳಗೆ ರೂಪುಗೊಳ್ಳುತ್ತದೆ ಎನ್ನುವ ಮಾತಿದೆ. ಶಿಕ್ಷಕರು ಭವ್ಯ ಭಾರತವನ್ನು ನಿರ್ಮಿಸುವ ಶಿಲ್ಪಿಗಳಾಗಿದ್ದಾರೆ. ಶಿಕ್ಷಕರು ಪ್ರಾಮಾಣಿಕ ಸೇವೆಯಿಂದ ಮಕ್ಕಳ ವ್ಯಕ್ತಿತ್ವವನ್ನು ನಿಮಾರ್ಣ ಮಾಡುತ್ತಾರೆ. ಮಣ್ಣಿನಿಂದ ಸುಂದರ ಮೂರ್ತಿ ರೂಪಿಸುವಂತೆ ಶಿಕ್ಷಕರೂ ಕೂಡಾ ಮಕ್ಕಳನ್ನು ತಿದ್ದಿ ತೀಡಿ ಮಕ್ಕಳ ಭವಿಷ್ಯ ರೂಪಿಸುತ್ತಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟರು.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆಯು ಶಿಕ್ಷಣಕಾಶಿ ಎಂದು ಹೆಸರುವಾಸಿಯಾಗಿದೆ. ಉತ್ತಮ ಗುಣಮಟ್ಟದ, ಶಿಸ್ತು ಬದ್ದ ಶಿಕ್ಷಣ ವ್ಯವಸ್ಥೆಯಿಂದಾಗಿ ದೇಶ-ವಿದೇಶಗಳಲ್ಲಿ ಹೆಸರು ಮಾಡಿದ್ದು, ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿಯೂ ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಸ್ಥಾನಮಾನಗಳನ್ನು ಕಾಯುಕೊಳ್ಳುವಲ್ಲಿ ಸಹಕರಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿ, ಶಿಕ್ಷಣದಲ್ಲಿ ಜಿಲ್ಲೆಯ ಸಾಧನೆಗೆ ಶಿಕ್ಷಕರ ಶ್ರಮ ಮತ್ತು ಶ್ರದ್ಧೆ ಕಾರಣ. ಶಿಕ್ಷಕರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆಯ ಜೊತೆಗೆ ಜೀವನ ಕೌಶಲ್ಯಗಳಲ್ಲಿಯೂ ಮಾರ್ಗದರ್ಶನ ನೀಡಬೇಕು. ತಮ್ಮ ವೃತ್ತಿ ಜೀವನದ ಅನುಭವವನ್ನು ಧಾರೆ ಎರೆದು ಮಕ್ಕಳಲ್ಲಿ ನಾಗರಿಕ ಪ್ರಜ್ಞೆ, ವೃತ್ತಿ ಆಧಾರಿತ ಕೌಶಲ್ಯಗಳು, ವೃತ್ತಿ ಸಮಾಲೋಚನೆಗಳು, ಜೀವನ ಶೈಲಿಯ ಪಾಠಗಳನ್ನೂ ಕಲಿಸಿಕೊಡಬೇಕು ಎಂದರು.
ಟ್ಯಾಲೆಂಟ್ ಹಂಟ್
ಜಿಲ್ಲಾಡಳಿತ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ಶಾಲೆಗಳಲ್ಲಿ ಟ್ಯಾಲೆಂಟ್ ಹಂಟ್ ಕಾರ್ಯಾಗಾರ ಆಯೋಜಿಸಲಿದೆ. ಇದಕ್ಕೆ ಅಗತ್ಯ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಜಿಲ್ಲಾ ಮಟ್ಟದಲ್ಲಿ ಉತ್ತಮ ತರಬೇತಿ ನೀಡಲಾಗುವುದು. ಈ ರಾಜ್ಯ, ದೇಶ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಮಿಂಚುವಂತಾಗಬೇಕು ಎಂಬುದು ನಮ್ಮ ಆಶಯ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಶ್ಯಾಮಿಲಿ ಜಿ.ಶಂಕರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ್ ಶೆಟ್ಟಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಅಶೋಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಣ ಪ್ರಶಸ್ತಿ ಪಡೆದ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ವಿಶೇಷ ಉಪನ್ಯಾಸ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ ಸ್ವಾಗತಿಸಿದರು. ಒಳಕಾಡು ಶಾಲೆಯ ಅಧ್ಯಾಪಕ ಗಣಪತಿ ಭಟ್ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ವಂದಿಸಿದರು.