ವಿಜಯವಾಣಿ ಸುದ್ದಿಜಾಲ ಉಡುಪಿ
ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲೂ ಸಹ ಬೆಡ್ ಸಮಸ್ಯೆ ಉಂಟಾಗುತ್ತಿದ್ದು, ಒಂದು ವರ್ಷದಿಂದ ಆಯುಷ್ಮಾನ್ ಭಾರತ್ ಯೋಜನೆ ಕಾರ್ಯರೂಪಕ್ಕೆ ತರಲು ತೊಂದರೆಯಾಗುತ್ತಿದೆ. ನ.25ರ ಒಳಗೆ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರತಿಭಟನೆ ನಡೆಸಲಿದೆ ಎಂದು ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಎಚ್ಚರಿಕೆ ನೀಡಿದರು.
ಈ ವಿಚಾರವಾಗಿ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರನ್ನು ಗುರುವಾರ ಭೇಟಿಯಾಗಿ, ವಿಚಾರ ಪ್ರಸ್ತಾಪಿಸಿ ಮನವಿ ಸಲ್ಲಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಯೋಜನೆ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಾದ ತಾವು ಸೂಕ್ತ ಆಡಳಿತಾತ್ಮಕ ಕಾರ್ಯಾದೇಶ ಹೊರಡಿಸಬೇಕೆಂದು ವಿನಂತಿಸುತ್ತೇವೆ. ಇಲ್ಲದಿದ್ದಲ್ಲಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಉಪಾಧ್ಯಕ್ಷರಾದ ಪ್ರಸಾದ್ ಬಿಲ್ಲವ, ಅರ್ಜುನ್ ಪ್ರಭು, ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಮಣಿಪಾಲ್, ನಿಖಿಲ್ ಮಡಿವಾಳ್, ಧನುಷ್ ಕಡಿಯಾಳಿ ಹಾಗೂ ಯುವ ಮೋರ್ಚಾದ ಕಾರ್ಯಕರ್ತರು ಇದ್ದರು.
ಕೆಲವು ಖಾಸಗಿ ಆಸ್ಪತ್ರೆಯವರು ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡದೆ ಕಡೆಗಣಿಸುತ್ತಿದ್ದಾರೆ. ಅದರಿಂದ ಬಡ ಜನರಿಗೆ ತುಂಬ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕ ವಲಯದಿಂದ ಸಾಕಷ್ಟು ದೂರು ಕೇಳಿ ಬರುತ್ತಿದೆ. ಆರೋಗ್ಯಕ್ಕೆ ಸಂಬಂಧಿತ ಈ ವಿಚಾರವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಸೂಕ್ತ ತನಿಖೆ ನಡೆಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿತು.