ಉಡುಪಿ: ಪ್ರಜಾಪ್ರಭುತ್ವದ ಮಹತ್ವ ಸಾರಲು ಸರ್ಕಾರದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ಬೈಂದೂರಿನ ಶಿರೂರು ಗೇಟ್ನಿಂದ ಕಾಪು ಹೆಜಮಾಡಿ ಸೇತುವೆಯ ವರೆಗೆ ಸುಮಾರು 107 ಕಿ.ಮೀ. ಮಾನವ ಸರಪಳಿ ರಚಿಸಲಾಗುವುದು. ಈ ವಿಶೇಷ ಕಾರ್ಯಕ್ರಮ ಯಶಸ್ವಿಗೊಳಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚಣೆ ಪ್ರಯುಕ್ತ ಸೆ.15ರಂದು ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಗುರುವಾರ ಬೆಳಗ್ಗೆ ಉಡುಪಿಯ ಕುಂಜಾರುಗಿರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ನಡೆಸಿದ ಟ್ರೆಕಿಂಗ್ಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ಬೋಧಕ/ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಸಹಕಾರಿ ಸ್ವ-ಸಹಾಯ ಸಂಗಳು, ರೋಟರಿ, ಲಯನ್ಸ್, ರೆಡ್ಕ್ರಾಸ್ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸೇರಿ ಲಾಂಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣಕುಮಾರ್ ಕೆ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಯ್ಯ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಉಪನಿರ್ದೇಶಕ ರವೀಂದ್ರ, ಕಾಪು ತಹಸೀಲ್ದಾರ್ ಪ್ರತಿಭಾ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿ, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ 500 ಮೀಟರ್ ಉದ್ದದ ಹಾಗೂ 3 ಮೀಟರ್ ಅಗಲದ ಭಾರತ ಹಾಗೂ ಕರ್ನಾಟಕ ಧ್ವಜ ಪ್ರದರ್ಶನ ಮಾಡಲಾಗುವುದು. ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿ ಜಿಲ್ಲಾಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ.| ಡಾ. ಕೆ.ವಿದ್ಯಾಕುಮಾರಿ. ಜಿಲ್ಲಾಧಿಕಾರಿ, ಉಡುಪಿ