ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಎಸ್.ಡಿ.ಪಿ.ಐ. ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲ್ಲಿಸಲಾಯಿತು.
- ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಆರೋಪ ಕೇಳಿಬಂದ ಹಿನ್ನೆಲೆ
- ಅವ್ಯವಸ್ಥೆ ಸರಿಪಡಿಸಲು ಸೂಚನೆ
ಬೆಳ್ತಂಗಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್.ತಿಮ್ಮಯ್ಯ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ, ಅಧಿಕಾರಿಗಳ ಸಭೆ ನಡೆಸಿದರು.
ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಸಮರ್ಪಕವಾಗಿ ದೊರೆಯುತ್ತಿಲ್ಲ ಮತ್ತು ಅಧಿಕಾರಿಗಳು ನಿರ್ಲಕ್ಷೃ ತೋರಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಆಸ್ಪತ್ರೆಯ ಆಂಬುಲೆನ್ಸ್ ವಾಹನದಲ್ಲಿ ಔಷಧ ಸಾಮಗ್ರಿ ಸಾಗಿಸಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಈ ಎಲ್ಲ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದರು.
ಡಿಎಚ್‌ಒ ಭೇಟಿಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸ್‌ಡಿಪಿಐ ಪಕ್ಷದವರು ಆಸ್ಪತ್ರೆಯ ಬಗ್ಗೆ ಅಸಮಾಧಾನ ಹೊರಹಾಕಿ, ಅವ್ಯವಸ್ಥೆ ಸರಿಪಡಿಸುವಂತೆ ಮನವಿ ಸಲ್ಲಿಸಿದರು. ಖಾಸಗಿ ಆಂಬುಲೆನ್ಸ್ ಚಾಲಕ ಜಲೀಲ್ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದರು. ಸಮಸ್ಯೆ ಶೀಘ್ರ ಸರಿಪಡಿಸುವುದಾಗಿ ತಿಮ್ಮಯ್ಯ ಭರವಸೆ ನೀಡಿದರು.
ವೈದ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಔಷಧ ಸಮಸ್ಯೆ ಆಗದಂತೆ ಸಕಾಲದಲ್ಲಿ ಖರೀದಿ ಮಾಡಲು ಸೂಚನೆ ನೀಡಿದ್ದೇನೆ. ರಾಜ್ಯ ಮಟ್ಟದಿಂದಲೂ ಔಷಧ ಸರಬರಾಜು ಆಗುತ್ತಿದೆ. ನಮ್ಮಲ್ಲಿ ಅನುದಾನಕ್ಕೂ ಕೊರತೆ ಇಲ್ಲ. ಸಿ.ಸಿ. ಕ್ಯಾಮರಾ ಅಳವಡಿಕೆ, ಶವಾಗಾರ ಕಟ್ಟಡ ಶೀಘ್ರ ಮುಗಿಸಲು ಸೂಚಿಸಲಾಗಿದೆ. ಸ್ವಚ್ಛತೆ ಕೊರತೆ ಇದೆ. ಮಂಗಳೂರಿಗೆ ರೋಗಿಗಳನ್ನು ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ, ಹಿಂದೆ ಖಾಲಿ ಬರುವಾಗ ಔಷಧ ತರುತ್ತಾರೆ. ಆದರೂ ಇದರಿಂದ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
— ಎಚ್.ಆರ್.ತಿಮ್ಮಯ್ಯ ಜಿಲ್ಲಾ ಆರೋಗ್ಯಾಧಿಕಾರಿ