ಕೊಪ್ಪಳ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಹಿಟ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡ ತುಂಬಾ ಸ್ಪಷ್ಟವಾಗಿ ಹೇಳಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಕೂಡ. ಇದರಿಂದ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದವರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರನ್ನೇ ಕೇಳಬೇಕು ಎಂದರು.
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಬಂದ ಪ್ರದೇಶದ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರಕಾರ ಈಗಾಗಲೇ ತ್ವರಿತವಾಗಿ ಪರಿಹಾರ ನೀಡುವ ಕಾರ್ಯ ಮಾಡುತ್ತಿದೆ. ಸೆ.6 ರಂದು ಕೊಪ್ಪಳದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ, ಮಲ್ಲಿಕಾರ್ಜುನ ಖರ್ಗೆ ಸೇರಿ ಅನೇಕ ಸಚಿವರು ಆಗಮಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸೆ. 6 ರಂದು ಒಟ್ಟು 1500 ಕೋಟಿ ರೂ. ಅನುದಾನದ ಕಾಮಗಾರಿ ಶಂಕುಸ್ಥಾಪನೆ ನೆರವೇರಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದ ಕೊಪ್ಪಳ ಕ್ಷೇತ್ರದಲ್ಲಿ ಸುಮಾರು 1.30 ಲಕ್ಷ ಎಕರೆ ಭೂಮಿ ನೀರಾವರಿ ಆಗಿದೆ. ಕೊಪ್ಪಳದ ಅಭಿವೃದ್ಧಿಗೆ ಸಿಎಂ ಕೊಡುಗೆ ದೊಡ್ಡದು ಎಂದರು.