ಕೊಪ್ಪಳ: ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕಾರಣ. ಜನರ ಬಗ್ಗೆ ಬಿಜೆಪಿಗರಿಗೆ ಕಾಳಜಿ ಇದ್ದರೆ ಬೆಲೆ ಇಳಿಕೆ ಮಾಡಲಿ ಎಂದು ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ನೀತಿಗಳಿಂದ ಬೆಲೆ ಹೆಚ್ಚಳವಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ. ಅದನ್ನು ಖಂಡಿಸುವ ಬದಲು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂಡಿಸುತ್ತಿದ್ದಾರೆ. ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹುನ್ನಾರ ನಡೆಸಿದ್ದಾರೆ. ಎಲ್ಲ ವಿಷಯಗಳಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ. ಆದರೂ, ಕಾಂಗ್ರೆಸ್ ಉತ್ತಮ ಆಡಳಿತ ನೀಡುತ್ತಿದೆ ಎಂದು ಸಮರ್ಥಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಸಾಲ 55 ಲಕ್ಷ ಕೋಟಿ ರೂ. ಇತ್ತು. ಈಗ 255 ಲಕ್ಷ ಕೋಟಿ ಆಗಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ದುಪ್ಪಟ್ಟಾಗಿದೆ. ಮಾನವೀಯತೆ ಕಳೆದುಕೊಂಡಿದ್ದು ಜನಾಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕಿಡಿ ಕಾರಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಮಹಿಳಾ ಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ ಇದ್ದರು.