ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಯಾವುದೇ ರೀತಿ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಿ ಅದರ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಲು ಸೂಚನೆ ನೀಡಿದರು.
ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ 4 ಸಭೆಗಳನ್ನು ನಡೆಸಬೇಕಾಗಿದ್ದು, 2024ನೇ ಕ್ಯಾಲೆಂಡರ್ ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಿ ಎಂದು ಹೇಳಿದರು.ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕಾಗಿರುತ್ತದೆ, ಈಗಾಗಲೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಂದು ಸಭೆಯನ್ನು ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು ತಿಳಿಸಿದರು.