ಮಂಡ್ಯ: ಮಕ್ಕಳಲ್ಲಿ ಪ್ರತಿಭೆ ಮತ್ತು ಶಿಕ್ಷಣ ಇದ್ದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ರವಿಕುಮಾರ್ ಗಣಿಗ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರ ಕನಸನ್ನು ಮಕ್ಕಳು ನನಸು ಮಾಡಬೇಕು. ಅದೇ ರೀತಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನೇಕ ಸವಲತ್ತುಗಳನ್ನು ನೀಡಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳು ಆಗಬಾರದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಯಶಸ್ಸು ಸಾಧಿಸಿ ಕೀರ್ತಿವಂತರಾಗಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ಮಾರ್ಗದರ್ಶನದೊಂದಿಗೆ ಅವಕಾಶ ಕಲ್ಪಿಸಲಾಗುವುದೇ ಪ್ರತಿಭಾ ಕಾರಂಜಿ ಉದ್ದೇಶ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳು ಸಹಾಯ ಮಾಡುತ್ತದೆ. ಶಿಕ್ಷಕರು ಮಕ್ಕಳ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ, ವಿದ್ಯಾರ್ಥಿಗಳಿಗೆ ಆ ವಿಷಯದಲ್ಲಿ ಸೂಕ್ತ ವೇದಿಕೆ ಕಲ್ಪಿಸಿ ಕೊಡಬೇಕು. ಆಗ ಮಾತ್ರ ಶಿಕ್ಷಕ ವೃತ್ತಿಗೆ ಸಾರ್ಥಕತೆ ದೊರೆಯುತ್ತದೆ ಎಂದರು.
ಕಳೆದ ಬಾರಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿರುವುದಿಲ್ಲ. ಈ ಬಾರಿಯ ಫಲಿತಾಂಶ ಉತ್ತಮಗೊಳಿಸಲು ಕಳೆದ 10 ತಿಂಗಳಿಂದ ಜಿಲ್ಲಾಮಟ್ಟದಲ್ಲಿ ಮುಖ್ಯ ಶಿಕ್ಷಕರು ಹಾಗೂ ಅಧಿಕಾರಿಗಳ ಸಭೆಗಳನ್ನು ನಡೆಸಿ ಪ್ರಗತಿ ಪರಿಶೀಲನಾ ನಡೆಸಲಾಗುತ್ತಿದೆ. ಫಲಿತಾಂಶ ಉತ್ತಮ ಸ್ಥಾನದಲ್ಲಿ ಬರಬೇಕೆಂದರೆ ಮಕ್ಕಳಿಗೆ ಗುಣಮಟ್ಟದ ಜತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಇದು ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಸಾಧ್ಯ ಎಂದರು.
ಮುಡಾ ಅಧ್ಯಕ್ಷ ನಯೀಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಡಿಪಿಐ ಎಚ್.ಶಿವರಾಮೇಗೌಡ, ರಾಜ್ಯ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಕೆ.ನಾಗೇಶ್ ಇತರರಿದ್ದರು.