ಜಿಲ್ಲೆ

ವಿಜ್ಞಾನ, ತಂತ್ರಜ್ಞಾನ ಅರಿವು ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮತ

ಕೆ.ಎನ್.ರಾಘವೇಂದ್ರ

ಮಂಡ್ಯ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅರಿವು ಅತ್ಯಾವಶ್ಯಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್‌ಸಿ) ಮತ್ತು ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್(ಐಎಸ್‌ಆರ್‌ಒ) ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ತರಂಗ ಸ್ಪರ್ಧೆಯ ಫೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಲು ಸ್ಪರ್ಧಾ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ವಿಷಯವಾಗಿದೆ. ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಎಂದು ಶುಭ ಹಾರೈಸಿದರು.

ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಮಂಡ್ಯ ಎಸಿ ಶಿವಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ಆ.30ರಂದು ಸ್ಪರ್ಧೆ: ನಗರದ ಹೊರವಲಯದ ಎ ಆ್ಯಂಡ್ ಎ ಕಲ್ಯಾಣ ಕನ್ವೆನ್ಷನ್ ಹಾಲ್‌ನಲ್ಲಿ ಆ.30ರಂದು ಜಿಲ್ಲಾಮಟ್ಟದ ವಿಜ್ಞಾನ ತರಂಗ ಸ್ಪರ್ಧೆ ಆಯೋಜಿಸಲಾಗಿದೆ. ಇಸ್ರೋ ಸಂಸ್ಥೆ ವತಿಯಿಂದ ಸ್ಪೇಸ್ ಆನ್ ವೀಲ್ ಬಸ್ ಪ್ರದರ್ಶನವಿರಲಿದೆ. ವಿಜ್ಞಾನೋತ್ಸವದಲ್ಲಿ ಭಾಗಿಯಾಗುವ 250 ರಿಂದ 300 ಜನ ಮಕ್ಕಳಿಗೆ ಇಸ್ರೋ ಮ್ಯೂಸಿಯಂ ವೀಕ್ಷಣೆಗೆ ಅವಕಾಶವಿರಲಿದೆ. ಇದರ ವೆಚ್ಚವನ್ನು ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಭರಿಸಲಿದೆ.

ದೇಶದ ಹೆಸರಾಂತ ವಿಜ್ಞಾನ ಅನ್ವೇಷಣೆಯ ಸಂಸ್ಥೆಯ ಸಮಕ್ಷಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ತಮ್ಮ ಕೌಶಲ ಪ್ರದರ್ಶಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು, ಪ್ರತಿ ತರಗತಿಯಿಂದ ಇಬ್ಬರು ಮಕ್ಕಳು ಭಾಗವಹಿಸಬಹುದಾಗಿದೆ. ಅದರಂತೆ ಸುಮಾರು ಒಂದೂವರೆ ಸಾವಿರ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ. 5ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಲಿದೆ. ಪ್ರತಿ ತರಗತಿಗೂ ಮೂರು ಬಹುಮಾನ, ಆಕರ್ಷಕ ಉಡುಗೊರೆ, ಪ್ರಶಸ್ತಿ ಫಲಕ ಮತ್ತು ಪ್ರಮಾಣಪತ್ರ, ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ಸಿಗಲಿದೆ.