ಜಿಲ್ಲೆ

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲ್ಲ

ಎನ್.ವೆಂಕಟೇಶ್

ಸಂಸದ ಡಾ.ಕೆ.ಸುಧಾಕರ್ ಹೇಳಿಕೆ ಚೆಂಡೂರಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಗುಡಿಬಂಡೆ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲ್ಲ. ಅಭಿವೃದ್ಧಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜತೆಗೂ ಚರ್ಚಿಸುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ತಾಲೂಕಿನ ಹಂಪಸಂದ್ರ ಗ್ರಾಪಂ ವ್ಯಾಪ್ತಿಯ ಚೆಂಡೂರು ಗ್ರಾಮದಲ್ಲಿ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಸಮುದಾಯದ ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಕೇವಲ ಭಾಷಣಕ್ಕೆ ಸೀಮಿತವಾಗಿತ್ತು. ಆದರೆ, ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಬುಡಕಟ್ಟು ಸಮುದಾಯದ ಅಭಿವೃದ್ಧಿಯಾಗುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಸಾಮಾನ್ಯ ಮಹಿಳೆ ಇಂದು ರಾಷ್ಟ್ರಪತಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಾದರೂ ಬುಡಕಟ್ಟು ಸಮುದಾಯದ ಒಬ್ಬರನ್ನು ಇಂತಹ ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಿದೆೆಯೇ ಎಂದು ಪ್ರಶ್ನಿಸಿದರು.

ಪಿಎಂ ಕಿಸಾನ್ ಯೋಜನೆಯಡಿ ವರ್ಷಕ್ಕೆ 6 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಇದರ ಜತೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ 4 ಸಾವಿರ ರೂ. ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ 4 ಸಾವಿರ ನೀಡುವುದನ್ನು ನಿಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಜನರ ಯಾವುದೇ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿದರು.

ನಮ್ಮ ಮುಖಂಡರು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ತಿಳಿಸುವಂತಹ ಕೆಲಸ ಮಾಡಬೇಕು. ಪ್ರತಿ ಮನೆಗೂ ಭೇಟಿ ನೀಡಿ ಮನೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ದೊರೆಯುತ್ತಿವೆಯೇ? ಇಲ್ಲವೇ? ಎಂಬುದನ್ನು ಖಚಿತಪಡಿಸಿಕೊಂಡು, ಅವರಿಗೆ ಯೋಜನೆ ಸೌಲಭ್ಯ ದೊರಕಿಸಿಕೊಡಬೇಕು. ಜನರು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ನನ್ನನ್ನು ಸಂಪರ್ಕಿಸಿ ಎಂದರು.

ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ, ಮುಖಂಡ ಹರಿನಾಥರೆಡ್ಡಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚೆಂಡೂರು ರಾಮಾಂಜಿ, ಮುಖಂಡರಾದ ಚಂದ್ರು, ಮದ್ದರೆಡ್ಡಿ, ಬೈರಾರೆಡ್ಡಿ, ನಾಗರಾಜ ರೆಡ್ಡಿ, ಚಂದ್ರು, ಚೆನ್ನಕೃಷ್ಣಾರೆಡ್ಡಿ ಸೇರಿ ಹಲವರು ಇದ್ದರು.

7 ಗುಡಿ 1

ಗುಡಿಬಂಡೆ ತಾಲೂಕಿನ ಚೆಂಡೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್ ಭೂಮಿಪೂಜೆ ನೆರವೇರಿಸಿದರು. ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ತಾಪಂ ಮಾಜಿ ಸದಸ್ಯ ಚೆಂಡೂರು ರಾಮಾಂಜಿ ಇತರರಿದ್ದರು.