ಚಾಮರಾಜನಗರ: ಅನುಮಾನಾಸ್ಪದ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿ ನಡೆದಿದೆ.
ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ ಡಾ.ಸಿಂದುಜಾ (28) ಸಾವನ್ನಪ್ಪಿದವರು. ಚೆನ್ನೈ ಮೂಲದ ವೈದ್ಯೆ ಸಿಂದುಜಾ ಕೊಳ್ಳೇಗಾಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳ ಜತೆ ಉತ್ತಮ ಒಡನಾಟ ಹೊಂದಿದ್ದ ಸಿಂಧುಜಾ ಗುರುವಾರ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಶುಕ್ರವಾರ ಕೆಲಸಕ್ಕೆ ಬಾರದೇ ಇದ್ದದ್ದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಅವರ ಮೊಬೈಲ್ ಫೋನಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಸದೆ ಇದ್ದಾಗ ಅನುಮಾನಗೊಂಡ ಸಿಬ್ಬಂದಿ ಮನೆ ಬಳಿ ತೆರಳಿ ಪರಿಶೀಲನೆ ನಡೆಸಿದಾಗ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸಿಂಧುಜಾ ಅವರ ದೇಹದ ಪಕ್ಕದಲ್ಲಿ ಚಾಕು, ಸಿರಿಂಜ್, ಔಷಧಿ ಸೇರಿದಂತೆ ಇನ್ನಿತರ ವಸ್ತುಗಳು ಪತ್ತೆಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಷಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವೈದ್ಯೆ ಸಿಂಧುಜಾ ಅವರ ಸಾವು ಅನುಮಾನಸ್ಪದವಾಗಿದ್ದು, ಕುಟುಂಬದವರು ದೂರು ನೀಡಿದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.