ವಿಜಯಪುರ: ಭಾರತದ ಸಂವಿಧಾನವನ್ನು ವಿಶ್ವದ ಎಲ್ಲ ದೇಶಗಳು ಗೌರವಿಸುತ್ತವೆ. ವಿಶ್ವದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಪೀಠಿಕೆ ಓದು ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಸಂವಿಧಾನವು ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆಯಾಗಿದೆ. ಸಂವಿಧಾನವು ನಮಗೆ ಧೈರ್ಯ, ಶಕ್ತಿ, ಶಿಕ್ಷಣ, ಸಮಾನತೆ, ಸಹಕಾರ, ಒಗ್ಗಟ್ಟಾಗಿ ಇರುವುದನ್ನು ಕಲಿಸಿಕೊಟ್ಟಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರೊಬ್ಬರು ಅವತಾರ ಪುರುಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ರಚಿತಗೊಂಡ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ನಮ್ಮ ಸಂವಿಧಾನವು ಎತ್ತಿ ತೋರಿಸುತ್ತದೆ ಎಂದು ಹೇಳಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಭಾರತೀಯರಾದ ನಾವು ಸಂವಿಧಾನದ ಮೇಲೆ ನಂಬಿಕೆ ಮತ್ತು ಶ್ರದ್ಧೆಯನ್ನಿರಿಸಿಕೊಳ್ಳಬೇಕು. ಅಭಿಮಾನ ತೋರಬೇಕು. ಸಂವಿಧಾನದ ಆಶಯಗಳಿಗೆ ಬದ್ಧರಾಗಿರಬೇಕು. ಇದುವೇ ನಿಜವಾದ ರಾಷ್ಟ್ರಪ್ರೇಮ ಎಂದರು.
ಎಎಸ್‌ಪಿ ಶಂಕರ ಮಾರಿಹಾಳ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಬಸವರಾಜ ಕಾಮಗೊಂಡ, ರಾಜಶೇಖರ ದೈವಾಡಿ ಮತ್ತಿತರರಿದ್ದರು.