ಜಿಲ್ಲೆ

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಎಸ್.ಎಲ್.ಎನ್. ಕಾಫಿ ಸಂಸ್ಥೆಯ ವತಿಯಿಂದ ಕಾಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ 7. ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಬುಧವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸÀರ್ಕಾರದ ಜತೆಗೆ ಸಾಮಾಜಿಕ ಸಂಸ್ಥೆಗಳ ಸಹಕಾರದೊಂದಿಗೆ ಹೆಚ್ಚಿನ ಅಭಿವೃದ್ಧಿ ಪಡಿಸಲು ಅನುಕೂಲವಾಗುವುದು. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಸಮುದಾಯ ಭವನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಎಸ್.ಎಲ್.ಎನ್ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪನ್, ವಿಶ್ವನಾಥನ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ದಿನೇಶ್, ಪಾರ್ವತಮ್ಮ, ಖತೀಜ, ವೀರ ಹನುಮ ಸೇವಾ ಸಮಿತಿ ಅಧ್ಯಕ್ಷ ಎನ್. ರಾಮೇಗೌಡ ಮತ್ತಿತರರು ಇದ್ದರು.