ಮಡಿಕೇರಿ: ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ದೃಢತೆ, ದೈಹಿಕ ಸಾಮರ್ಥ್ಯ, ಮಾನಸಿಕ ಸಮತೋಲನ ಮತ್ತು ನಾಯಕತ್ವದ ಗುಣಗಳನ್ನು ಬೆಳೆೆಸಿಕೊಳ್ಳಲು ಸಾಧ್ಯವಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು.
ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವವರಿಗೆ ಅಗತ್ಯವಾಗಿ ಇರಬೇಕಾದ ಈ ಎಲ್ಲಾ ಅಂಶಗಳನ್ನು ಕ್ರೀಡಾಚಟುವಟಿಕೆಗಳ ಮೂಲಕ ಪಡೆಯಬಹುದಾಗಿದೆ. ಅಲ್ಲದೇ, ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ಸದೃಢಗೊಳ್ಳಬಹುದು. ಜತೆಗೆ ನಾಯಕತ್ವದ ಗುಣಗಳನ್ನು ಬೆಳೆೆಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ ಮಾತನಾಡಿ, ಈ ವಾರ್ಷಿಕ ಕ್ರೀಡಾಕೂಟಕ್ಕಾಗಿ ಶ್ರಮಿಸಿದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕೇವಲ ಆರು ಗಂಟೆಗಳ ಅವಧಿಯಲ್ಲಿ ಡಿಎಆರ್ ಮೈದಾನವನ್ನು ಸಜ್ಜುಗೊಳಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಎಲ್ಲಾ ಠಾಣೆಯ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿದಿನ ಕರ್ತವ್ಯದ ಜಂಜಾಟದಲ್ಲಿ ಇರುವವರು ಒಂದಷ್ಟು ಸಮಯ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಉದ್ಘಾಟನಾ ಕಾರ್ಯಕ್ರಮದ ನಂತರ ವಿವಿಧ ಸ್ಪರ್ಧೆಗಳಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಆಸಕ್ತಿಯಿಂದ ಪಾಲ್ಗೊಂಡಿದು ವಿಶೇಷವಾಗಿತ್ತು. ಇದೇ ಡಿ.೨೬ರಂದು ಸಂಜೆ ೪ ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಸುಂದರ್ ರಾಜ್, ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.