ಚಳ್ಳಕೆರೆ: ಬರಗಾಲ, ಮುಂಗಾರು ಕೊರತೆಯಿಂದಾದ ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಮತ್ತು ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ನೇತೃತ್ವದ ನಿಯೋಗವು ಚಳ್ಳಕೆರೆ ತಾಲೂಕಿನ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮುಂಗಾರು ಮಳೆ ಕೊರತೆಯಿಂದಾಗಿ ಶೇಂಗಾ (ನೆಲಗಡಲೆ) ಮತ್ತು ತೊಗರಿ ಸೇರಿದಂತೆ ವಾರ್ಷಿಕ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದರೂ, ಸರ್ಕಾರ ಇದುವರೆಗೂ ರೈತರಿಗೆ ಪರಿಹಾರ ಮಂಜೂರು ಮಾಡಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ದೂರಿದರು.
ಬುಧವಾರ ತಾಲೂಕಿನ ದ್ಯಾವರನಹಳ್ಳಿ ಸಮೀಪದ ರೈತರ ಜಮೀನುಗಳಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು, ಸೆಪ್ಟೆಂಬರ್‌ನಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ನಷ್ಟವಾಗಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಬೆಳೆ ವಿಮೆ ಮತ್ತು ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳು ಸೇರಿದಂತೆ ಇತರೆ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಅಲ್ಲದೆ, ಎಕರೆ ಶೇಂಗಾ ಬೆಳೆಗೆ ₹50 ಸಾವಿರದಂತೆ ಪರಿಹಾರ ಘೋಷಿಸಬೇಕು. ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳನ್ನು ತಕ್ಷಣ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ಬರದಿಂದಾಗಿ ಜೀವನೋಪಾಯಕ್ಕಾಗಿ ಜನರು ವಲಸೆ ಹೋಗುವುದನ್ನು ತಡೆಯಲು ಗ್ರಾಮಗಳಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ
ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಿ. ನವೀನ್ ಮಾತನಾಡಿ, ರಾಜ್ಯದ ಕೆಲವು ಭಾಗದಲ್ಲಿ ಅತಿವೃಷ್ಟಿ ಮತ್ತು ಮಧ್ಯ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದ ಬೆಳೆ ನಷ್ಟವಾಗಿದ್ದು ರೈತರು ಸಾಲಗಾರರಾಗಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿಲ್ಲ. ಕೇವಲ ಗ್ಯಾರಂಟಿ ಯೋಜನೆಗಳ ಸಾಧನೆ ಹೇಳಿಕೊಂಡು ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು.
ಸರ್ಕಾರ ಕೂಡಲೇ ರೈತರಿಗೆ ಪರಿಹಾರ ಘೋಷಿಸಬೇಕು. ಇಲ್ಲದಿದ್ದರೆ, ಸರ್ಕಾರದ ವಿರುದ್ಧ ಪ್ರತಿಭಟನೆ ರೂಪಿಸಬೇಕಾಗುತ್ತದೆ ಎಂದು ನವೀನ್ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಬಿ.ಎಂ. ಸುರೇಶ್ ಹಿರೇಮಧುರೆ, ಉಪಾಧ್ಯಕ್ಷ ಸಿದ್ದೇಶ್, ಬಾಳೆಕಾಯಿ ರಾಮ್‌ದಾಸ್, ವೆಂಕಟೇಶ್ ಯಾದವ್, ಆರ್. ಸುರೇಶ್, ಮಲ್ಲಿಕಾರ್ಜುನ, ನಾಗೇಂದ್ರ, ಶೋಭರಾಜ್, ಸಿದ್ದೇಶ್, ಜಯರಾಮ್, ಕರೀಕೆರೆ ಶಿವಣ್ಣ, ರಾಘವೇಂದ್ರ, ಕರಿಯಣ್ಣ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.