ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳನ್ನು ಬರ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬರ ಪರಿಸ್ಥಿತಿಯ ನಿರ್ವಹಣೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಬರ ನಿರ್ವಹಣೆ ಕುರಿತು ಸಭೆ ನಡೆಸಿ ವರದಿ ನೀಡಬೇಕು, ಬರದ ತೀವ್ರತೆ ಪರಿಗಣಿಸಿ ನೀರು ಮತ್ತು ಆಹಾರವನ್ನು ಪೂರೈಸಲು ಅಧಿಕಾರಿಗಳು ನಿಗಾವಹಿಸಬೇಕು. ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಟ್ಯಾಂಕರ್ ನೀರು ಪೂರೈಸಿ ಎಂದು ತಿಳಿಸಿದರು.
ಮಳೆ ಕೊರತೆಯಿಂದಾಗಿ ಅಂತರ್ಜಲಮಟ್ಟ ಕುಸಿದಿದೆ. ಜಲಜೀವನ್ ಮಿಷನ್ ಕಾಮಗಾರಿ ವಿಳಂಬವಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲವು ಸ್ಥಳಗಳಲ್ಲಿ ನಿರ್ವಹಣೆ ಇಲ್ಲದೆ ಹಾಳಾಗಿವೆ. ತಿಂಗಳ ಗಡುವಿನೊಳಗೆ ಜಿಲ್ಲೆಯ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆಯೊಂದಿಗೆ ಕಾರ್ಯನಿರ್ವಹಿಸಲು ಕ್ರಮವಹಿಸಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
6 ಕೋಟಿ ರೂ.ಬಿಡುಗಡೆ: ಜಿಲ್ಲೆಯಲ್ಲಿ 46,003 ಹೆಕ್ಟೇರ್ ರಾಗಿ, 3,477 ಹೆಕ್ಟೇರ್ ಮೆಕ್ಕೆಜೋಳ ಹಾಗೂ ಇತರ ಬೆಳೆಗಳು ಸೇರಿ 49,559 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಪ್ರಸ್ತುತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರದಿಂದ 6 ಕೋಟಿ ರೂ.ಬರ ಪರಿಹಾರಕ್ಕಾಗಿ ಹಣ ಬಿಡುಗಡೆಯಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಶಿವಶಂಕರ್ ಸಚಿವರಿಗೆ ಮಾಹಿತಿ ನೀಡಿದರು.