ಜಿಲ್ಲೆ

ಬರ ಪರಿಹಾರ : ಬಹಿರಂಗ ಚರ್ಚೆಗೆ ಬನ್ನಿ ಎಂದು ನಿರ್ಮಲ ಸೀತಾರಾಮನ್‌ಗೆ ಸಿದ್ದರಾಮಯ್ಯ ಆಹ್ವಾನ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನದ ಅವಶ್ಯಕತೆ ಇಲ್ಲ, ರಾಜ್ಯಕ್ಕೆ ನ್ಯಾಯಯುತವಾಗಿ ದೊರೆಯಬೇಕಾದ ಬರಪರಿಹಾರ ನೀಡಿದರೆ ಸಾಕು. ಬರಪರಿಹಾರ ನೀಡುವ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ನಗರದ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಬುಧವಾರ ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬೆಂಬಲಿಗರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲದೆ ಕೇಂದ್ರದ ಬಳಿ ರಾಜ್ಯ ಸರ್ಕಾರ ಅನುದಾನ ಕೇಳುತ್ತಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ನೀವು ಗ್ಯಾರಂಟಿ ಯೋಜನೆಗೆ ಒಂದು ಪೈಸೆಯನ್ನು ನೀಡುವುದು ಬೇಡಮ್ಮ, ನಮ್ಮ ಬಳಿ ಯೋಜನೆ ಅನುಷ್ಠಾನಕ್ಕೆ ಅನುದಾನ ಲಭ್ಯವಿದೆ. ಇದಕೋಸ್ಕರ ಬಜೆಟ್‌ನಲ್ಲಿ 52 ಸಾವಿರ ಕೋಟಿ ರೂ. ಕಾಯ್ದಿರಿಸಲಾಗಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಹಂಚಿಕೆಯಲ್ಲಿ ಮಾಡುತ್ತಿರುವ ಅನ್ಯಾಯದ ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂದು ಆಹ್ವಾನ ನೀಡಿದರು.

ಕೇಂದ್ರ ಸರ್ಕಾರ ರಾಜ್ಯವನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ. ಇದು 7 ಕೋಟಿ ಕನ್ನಡಿಗರಿಗೆ ಮಾಡಿದ ದ್ರೋಹ. ಕೇಂದ್ರ ಸರ್ಕಾರ ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಬರಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವ ನಿರ್ಮಲ ಸೀತಾರಾಮ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಆದರೆ, ಇದುವರೆಗೆ ಬರಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ನಾವು ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ ಎಂದರು.

ಭದ್ರ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5300 ಕೋಟಿ ರೂ. ಘೋಷಿಸಲಾಗಿತ್ತು. ಆದರೆ, ಒಂದೇ ಒಂದು ಪೈಸೆ ಅನುದಾನ ಪ್ರಸಕ್ತ ವರ್ಷ ಬಂದಿಲ್ಲ. ನಿಮಗೆ ದೇವರ ಮೇಲೆ ನಂಬಿಕೆ ಇದ್ದರೆ ಹಣ ನೀಡಿರುವ ಕುರಿತು ಪ್ರಮಾಣ ಮಾಡಿ ಎಂದು ಸವಾಲು ಹಾಕಿದರು.

‘ಸಬ್ ಕಾ ಸಾತ್ ಸಬ್ ಕಾ ವಿಕಾಸ್’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಆದರೆ, ಮತ್ತೊಂದೆಡೆ ಗಡ್ಡ ಬಿಟ್ಟವರು, ಶಿಲುಬೆ ಧರಿಸಿದವರು ಮನೆಗೆ ಬರಬೇಡಿ ಅನ್ನುತ್ತಿದ್ದಾರೆ. ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರು ಇದ್ದರೆ ಅದು ನರೇಂದ್ರ ಮೋದಿ ಮಾತ್ರ. ಸುಳ್ಳನ್ನೇ ಬಿಜೆಪಿ ಮನೆದೇವರನ್ನಾಗಿ ಮಾಡಿಕೊಂಡಿದೆ. ವಿದೇಶದಿಂದ ಕಪ್ಪು ಹಣ ಹೊರತೆಗೆದು ಬಡವರ ಖಾತೆಗೆ 15 ಲಕ್ಷ ರೂ. ಹಾಕಲಾಗುವುದು ಎಂದು ಮೋದಿ ಭರವಸೆ ನೀಡಿದ್ದ ಭರವಸೆ ಇದುವರೆಗೆ ಈಡೇರಿಲ್ಲ. ರೈತರರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ನೀಡಿದ್ದ ಭರವಸೆಯನ್ನೂ ಈಡೇರಿಸಲಿಲ್ಲ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಅಂದರು, 10 ವರ್ಷಗಳ ಅವಧಿಯಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಾಗಿತ್ತು. ಅಷ್ಟು ಉದ್ಯೋಗ ಸೃಷ್ಟಿ ಆಗಿದೆಯೇ? ಬಿಜೆಪಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಟೀಕಿಸಿದರು.