ಜಿಲ್ಲೆ

ಜಾತಿ ಗಣತಿ ವರದಿ ಅಂಗೀಕರಿಸಲು ಆಗ್ರಹ: ನಗರದಲ್ಲಿ ದಸಂಸ ಕಾರ್ಯಕರ್ತರ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ರಾಜ್ಯ ಸರ್ಕಾರ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಗೊಳಿಸಬೇಕು ಹಾಗೂ ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಸಾಮಾಜಿಕ ನ್ಯಾಯದ ಗುರಿಗಳನ್ನು ತಲುಪಲು ಕಾಲ ಕಾಲಕ್ಕೆ ಜಾತಿ ಜನಗಣತಿಯ ನಿಖರ ವಿವರ ಆಧರಿಸಿ ಮೀಸಲಾತಿ ಹೆಚ್ಚಳ ಹಾಗೂ ಹಿಂದುಳಿದ ದುರ್ಬಲ ತಳಸಮುದಾಯಗಳ ಉನ್ನತಿಗಾಗಿ ಇನ್ನಿತರೆ ಯೋಜನೆ, ಕಾರ್ಯಕ್ರಮ ರೂಪಿಸುವುದು ಅನಿವಾರ್ಯ ಎಂದರು.

ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು. ಇದರಿಂದಾಗಿ ಸಮಾಜದಲ್ಲಿ ಅಸಮಾನತೆಯ ಕಂದಕಗಳು ಹೆಚ್ಚಾಗುತ್ತಲೇ ಇವೆ. ಜಾತಿ ಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲ ಪಟ್ಟಭದ್ರ ಜಾತಿವಾದಿ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ತೀವ್ರ ಅಸಮಾಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದೆ ಸಾಮಾಜಿಕ ನ್ಯಾಯದ ಪರವಾಗಿ ದೃಢ ನಿಲುವು ತಾಳಬೇಕೆಂದು ಆಗ್ರಹಿಸಿದರು.

ಜಾತಿ ಗಣತಿ ವರದಿಯ ಅಂಕಿ-ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಈಗಿರುವ ಶೇ.50ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ. 75ಕ್ಕೆ ಹೆಚ್ಚಳ ಮಾಡಲು ಕ್ರಮಕೈಗೊಳ್ಳುವುದರ ಮೂಲಕ ರಾಜ್ಯದ ಸಾಮಾಜಿಕ ನ್ಯಾಯದ ಪರಂಪರೆಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಎತ್ತಿ ಹಿಡಿದು ದೇಶಕ್ಕೇ ಮಾದರಿ ಆಡಳಿತ ನೀಡಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹುಲ್ಕೆರೆ ಮಹದೇವು, ಕೆ.ನಾಗರಾಜು, ಬಿ.ಜೆ.ನಾಗರಾಜು, ವೈ.ರಾಜಶೇಖರ್, ಎಚ್.ಪಿ.ಸೋಮಶೇಖರ್ ಇತರರಿದ್ದರು.