ಮಂಡ್ಯ: ಬೆಂಗಳೂರಿನಲ್ಲಿ ಹೋರಾಟಗಾರರ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಗೃಹಮಂತ್ರಿ ಆರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ ಎಂ.ವಿ. ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ನಡೆಸಲಾಗುತ್ತಿದೆ. ಈ ಮೂಲಕ ಪ್ರಜಾತಂತ್ರದ ಕಗ್ಗೊಲೆ ಮಾಡಲಾಗುತ್ತಿದೆ. ನ್ಯಾಯಯುತ ಬೇಡಿಕೆಗಾಗಿ ಹೋರಾಡುತ್ತಿರುವ ದಲಿತ ಹೋರಾಟಗಾರರ ಮೇಲೆ ಬೆಂಗಳೂರಿನ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಅದೇ ರೀತಿ ಕೋಲಾರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಧಿಕ್ಕಾರ ಕೂಗಿದ ಅಲ್ಲಿನ ನಗರಸಭೆ ಸದಸ್ಯ ಅಂಬರೀಷ್ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಬಳಿಕ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಸಾಂವಿಧಾನಿಕ ಜನಪ್ರತಿನಿಧಿಯಾಗಿದ್ದುಕೊಂಡು ರಾಷ್ಟ್ರನಾಯಕರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಅಧ್ಯಕ್ಷ ವೆಂಕಟಗಿರಿಯಯ್ಯ, ಶ್ರೀನಿವಾಸ್, ಮಹದೇವ, ಬಿ.ಎಂ.ಸೋಮಶೇಖರ್, ಆರ್ಮುಗಂ, ಎನ್.ನಿಂಗಯ್ಯ, ಎಸ್.ಕುಮಾರ್, ಎಚ್.ಬಿ.ಹರಿಕುಮಾರ್, ದೇವರಾಜ್ ನರಹಳ್ಳಿ ಇದ್ದರು.