ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಬಹುದು ಜತೆಗೆ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದ್ದಾರೆ.
ಇ- ಆಸ್ತಿ ಸಂಯೋಜನೆ ಕುರಿತು ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿನ ಡಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸಹಕಾರಿಯಾಗಲಿದೆ, ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸುತ್ತೋಲೆಯಂತೆ ಸಂಯೋಜನೆ: ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು ಜಮೀನಿನ ಸರ್ವೆ ನಕ್ಷೆ(ಸ್ಕೆಚ್)- ನಮೂನೆ 11 ಇ ಇರುವ ಮೋಜಣಿ ತಂತ್ರಾಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು 2016 ಅ.5 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು 2014 ಜು. 18 ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ ಎಂದು ಡಿಸಿ ವಿವರಿಸಿದರು. ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2, ತಂತ್ರಾಂಶದೊಂದಿಗೆ 2024 ಸೆ. ರಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ. ಆದಕಾರಣ ಜಿಲ್ಲಾ ವ್ಯಾಪ್ತಿಯ ಎಲ್ಲ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ ಎಂದು ತಿಳಿಸಿದ್ದಾರೆ.