ಬಿಡದಿ : ಉತ್ತಮ ಶಿಕ್ಷಣ ಹಾಗೂ ಆರೋಗ್ಯವನ್ನು ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಇದು ಎಲ್ಲರಿಗೂ ಸಿಗಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ತಾಲೂಕಿನ ಅಬ್ಬನಕುಪ್ಪೆ ಕಾಲನಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಸರ್ಕಾರಿ ಶಾಲಾ ಕಟ್ಟಡವನ್ನು ಬುಧವಾರ ಉದ್ಘಾಟಿಸಿ, ಮಾತನಾಡಿದರು.
ಟೊಯೋಟಾ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಸಂಸ್ಥೆ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕುಡಿಯುವ ನೀರಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಸುಸಜ್ಜಿತವಾಗಿ ನಿರ್ಮಾಣ ಮಾಡಿ, ಶಾಲೆಗೆ ಬೇಕಿರುವ ಪೀಠೋಪಕರಣ ಸೇರಿ ಶಾಲೆಯಲ್ಲಿ ಪೂರಕ ವಾತಾವರಣ ಸೃಷ್ಟಿ ಮಾಡಿಕೊಟ್ಟಿದ್ದಾರೆ. ಇಂತಹ ಸಮಾಜಮುಖಿ ಕೆಲಸ ಹೀಗೆ ಮುಂದುವರಿಯಲಿ ಎಂದರು.
ಸಂಸ್ಥೆ ನಿರ್ದೇಶಕ ಪ್ರಸಾದ್ ಮಾತನಾಡಿ, ನಾವು ಕೇವಲ ರಾಮನಗರ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಎಸ್‌ಆರ್ ನಿಧಿಯನ್ನು ಬಳಕೆ ಮಾಡಿ, ಸಾರ್ವಜನಿಕವಾಗಿ ಉಪಯೋಗವಾಗುವ ಕೆಲಸಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.
1982ರಲ್ಲಿ ಶಾಲೆ ಆರಂಭವಾದಾಗ ಪ್ರಥಮಬಾರಿಗೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕ ಬಿ.ಸೀತಾರಾಮಯ್ಯ ಅವರನ್ನು ಸನ್ಮಾನಿಸಲಾಯಿತು.
ಬಿಡದಿ ಪುರಸಭೆ ಅಧ್ಯಕ್ಷ ಹರಿಪ್ರಸಾದ್, ಉಪಾಧ್ಯಕ್ಷೆ ಮಂಜುಳಾ ಗೋವಿಂದಪ್ಪ, ಪುರಸಭಾ ಸದಸ್ಯರಾದ ಯಲ್ಲಮ್ಮ, ಉಮೇಶ್, ಪುರಸಭಾ ಮುಖ್ಯಾಧಿಕಾರಿ ರಮೇಶ್, ಶಿಕ್ಷಣ ಸಂಯೋಜಕ ನಂಜುಂಡಪ್ಪ, ಶಾಲೆಯ ಮುಖ್ಯಶಿಕ್ಷಕಿ ಅನುರಾಧಾ, ಮುಖಂಡರಾದ ಬ್ಯಟ್ಟಸ್ವಾಮಿ, ಅಬ್ಬನಕುಪ್ಪೆ ರಮೇಶ್, ಲೋಕೇಶ್ ಇದ್ದರು.