ಬೆಳಗಾವಿ: ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬ ಹೆಣ್ಣು ಮಗು ಶಿಕ್ಷಣ ಪಡೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ತ್ರೀ ಶಕ್ತಿ ಗುಂಪುಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಅಪ್ರತಿಮ ಸಾಧನೆಗೈದಿದ್ದಾರೆ ಎಂದು ಶ್ಲಾಘಿಸಿದರು.
ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು ಪ್ರೋತ್ಸಾಹ ನೀಡುವುದು ಇಲಾಖೆಯ ಧ್ಯೇಯವಾಗಿದೆ. ಈ ಕುರಿತು ಹಲವು ಕಾರ್ಯಕ್ರಮಗಳನ್ನು ಇಲಾಖೆ ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸ್ ಮಾತನಾಡಿ, ಮಹಿಳೆಯರಿಗೆ ಯಾವುದೇ ರೀತಿ ಕೌಟುಂಬಿಕ ದೌರ್ಜನ್ಯವಾದರೆ ಭಯಪಡದೆ ದೌರ್ಜನ್ಯ ತಡೆ ಕಾಯ್ದೆಯಡಿ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿದರು. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಪ್ರಭಾವತಿ ಪತ್ತಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ನವೀನಕುಮಾರ್, ಜಿಲ್ಲಾ ಅಂಧ ಮಕ್ಕಳ ಶಾಲೆ ಅಧ್ಯಕ್ಷ ವಿಕಾಸ ಕಲಘಟಗಿ ಇತರರು ಇದ್ದರು.