ಮಳವಳ್ಳಿ: ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿರುವ ಪಾಲಕರ ಮನವೊಲಿಸಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸುವಂತ ಶಿಕ್ಷಕರಿಗೆ ನಗದು ರೂಪದ ಬಹುಮಾನ ನೀಡುವುದಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸುಭದ್ರ ದೇಶ ನಿರ್ಮಾಣಕ್ಕಾಗಿ ಮುಂದಿನ ಪೀಳಿಗೆಗೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡಬೇಕಾದವರು ಶಿಕ್ಷಕರು. ಗುರು ದಾರಿ ತಪ್ಪಿದರೆ ಇಡೀ ದೇಶವೇ ದಾರಿ ತಪ್ಪುತ್ತದೆ. ಶಿಕ್ಷಣ ಮತ್ತು ನಾಡಿನ ಸಾಂಸ್ಕೃತಿಕ ಹೊಣೆಗಾರಿಕೆ ನಿಮ್ಮದಾಗಿರುವುದರಿಂದ ಜವಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ತರಬೇತಿ ಪಡೆದ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಆದರೆ ಪಾಲಕರು ಖಾಸಗಿ ಶಾಲೆಗಳ ಅಬ್ಬರದ ಪ್ರಚಾರಗಳಿಗೆ ಮಾರುಹೋಗಿ ಸಾಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಈಗಾಗಲೇ ಶೈಕ್ಷಣಿಕ ಕ್ಷೇತ್ರಕ್ಕೆ ತಾಲೂಕಿನಲ್ಲಿ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಮ್ಮ ತಾಲೂಕು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸಿನ ಕ್ರಾಂತಿಯನ್ನು ಮಾಡಬೇಕೆಂಬ ಹಂಬಲವಿದೆ. ಅದಕ್ಕೆ ಪೂರಕವಗಿ ಖಾಸಗಿ ಶಾಲೆಗಳಿಂದ ಮಕ್ಕಳನ್ನು ಕರೆತಂದು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿಕೊಳ್ಳುವ ಶಿಕ್ಷಕರಿಗೆ ವೈಯಕ್ತಿಕವಾಗಿ ನಗದು ರೂಪದಲ್ಲಿ ಬಹುಮಾನ ನೀಡಿ ಗೌರವಿಸುತ್ತೇನೆ ಎಂದರು.
ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಲೋಕೇಶ್, ತಾಪಂ ಇಒ ಶ್ರೀನಿವಾಸ್, ಬಿಇಒ ಚಂದ್ರಪಾಟೀಲ್, ಡಿವೈಎಸ್ಪಿ ಕೃಷ್ಣಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗಮನ ಸೆಳೆದ ರಕ್ತದಾನ ಶಿಬಿರ
ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಶಿಕ್ಷಕರು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಗಮನ ಸೆಳೆದರು. ಅಂಬೇಡ್ಕರ್ ಭವನದ ಒಳಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಶಿಕ್ಷಕರು ಶಿಬಿರದಲ್ಲಿ ರಕ್ತದಾನ ಮಾಡಿ ಮಾದರಿಯಾದರು. 40 ಯುನಿಟ್‌ಗೂ ಹೆಚ್ಚು ರಕ್ತ ಸಂಗ್ರಹವಾಯಿತು.