ಜಿಲ್ಲೆ

ಶೈಕ್ಷಣಿಕ ಕಾರ್ಯಾಗಾರ ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ, ರಾಜ್ಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘ, ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಫೆ. 22ರಂದು ಬೆಳಗ್ಗೆ 9.30ಕ್ಕೆ ಹುಬ್ಬಳ್ಳಿಯ ಆರ್​.ಎನ್​. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್​. ಹುದ್ದಾರ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕ ಎನ್​.ಎಚ್​. ಕೋನರಡ್ಡಿ, ಡಿಡಿಪಿಐ ಎಸ್​.ಎಸ್​. ಕೆಳದಿಮಠ, ಜಿ.ಆರ್​. ಭಟ್​, ಸಿದ್ದಬಸಪ್ಪ ಬಿ., ಅಶೋಕ ಹಂಚಲಿ, ರಾಜಣ್ಣ ಕೊರವಿ, ವಿಜಯಾನಂದ ಶೆಟ್ಟಿ, ಇತರರು ಆಗಮಿಸುವರು. ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಜಿ.ಆರ್​. ಭಟ್​ ಮಾತನಾಡಿ, ಸಮಾವೇಶದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಹಾಗೂ ಶಿಕ್ಷಕರ ಬಹುದಿನಗಳ ಬೇಡಿಕೆಗಳ ಕುರಿತು ಚರ್ಚೆಯಾಗಲಿದೆ. ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಕಲ್ಯಾಣಕ್ಕಾಗಿ ಚರ್ಚಿಸಲು ಈ ಸಮಾವೇಶ ಆಯೋಜಿಸಲಾಗಿದೆ. ಇವುಗಳ ಜತೆಗೆ ಬಹು ವರ್ಷಗಳ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಲಾಗುವುದು ಎಂದರು.

ಶಿಕ್ಷಕರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ಜಾರಿಗೊಳಿಸುವುದು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ನೀಗಿಸುವುದು, ಹಳೇ ನಿಶ್ಚಿತ ಪಿಂಚಣಿ ಯೋಜನೆ ಜಾರಿ ಹಾಗೂ ಅನುದಾನಿತ ನೌಕರರಿಗೆ ಬಸವರಾಜ ಹೊರಟ್ಟಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು ಸೇರಿ ಸರ್ಕಾರಿ ಹಾಗೂ ಅನುದಾನಿತ ನೌಕರರ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಬಿ.ಜಿ. ಬಶೆಟ್ಟಿ, ಎನ್​.ಎಸ್​. ಗೋವಿಂದರೆಡ್ಡಿ, ಸಂಗಮೇಶ ಪಟ್ಟಣಶೆಟ್ಟಿ, ಸಂಗಮೇಶ ಹಡಪದ, ಎನ್​.ಎಸ್​. ಸವಣೂರ, ನಾರಾಯಣ ಭಜಂತ್ರಿ, ಇತರರು ಇದ್ದರು.