ಜಿಲ್ಲೆ

ಎಲೆಕ್ಷನ್ ತಯಾರಿ ಪರಿಶೀಲನೆ: ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವ, ಪಕ್ಷಗಳೊಂದಿಗೆ ಸಭೆ

ರಮೇಶ್​ ಕುಮಾರ್​​ ಬಿ ಎಡಮೋಳೆ

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿ ಹಾಗೂ ಅಗತ್ಯ ಸಿದ್ಧತೆ ಪರಿಶೀಲನೆಯನ್ನು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಗುರುವಾರ ಪರಿಶೀಲಿಸಿತು. ಚುನಾವಣಾ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರು, ಆಯೋಗದ ಹಿರಿಯ ಅಧಿಕಾರಿಗಳು ಪರಿವೀಕ್ಷಣೆ ನಡೆಸಿದರು. ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ನೇತೃತ್ವದ ತಂಡವು ಮೊದಲಿಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಲಹೆ ಮತ್ತು ಅಭಿಪ್ರಾಯ ಪಡೆದುಕೊಂಡಿತು.

ಬಳಿಕ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಎಂ.ವೆಂಕಟೇಶ್ ಕುಮಾರ್, ರಾಜೇಂದ್ರ ಚೋಳನ್ ಸೇರಿ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡಿತು. ಇದೇ ಸಂದರ್ಭದಲ್ಲಿ ಅನೇಕ ಸಲಹೆ-ಸೂಚನೆಯನ್ನು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ನೀಡಿದರು.

ನಂತರ ಸಂಜೆ ಖಾಸಗಿ ಹೋಟೆಲ್​ನಲ್ಲಿ ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ ವಿಷಯದ ಕುರಿತ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯಿತು. ವಿವಿಧ ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರು ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡಿದ್ದರು.

ಇನ್ನೂ ಎರಡು ದಿನ ಸಭೆ: ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ತಂಡ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಸಂಜೆ ಐಐಎಸ್​ಸಿ ಆವರಣದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್​ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ತದನಂತರ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ಅಂಗವಿಕಲರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಮನವಿ

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಮುಖ್ಯ ಚುನಾವಣಾ ಆಯುಕ್ತರಿಗೆ ಕೆಪಿಸಿಸಿ ಮನವಿ ಸಲ್ಲಿಸಿದೆ. ಆಯೋಗ ಮತದಾರರ ಪಟ್ಟಿಗಳ ಪರಿಷ್ಕರಣೆ ಮತ್ತು ಇತರ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಅಳಿಸಲಾದ 33 ಲಕ್ಷ ಮತದಾರರನ್ನು ತಕ್ಷಣ ಮರುಸ್ಥಾಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳುಳ್ಳ ಮನವಿಯನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಮನವಿ ಸಲ್ಲಿಸಿದ್ದಾರೆ.

ಮನೋಜ್ ಕುಮಾರ್ ಮೀನಾ ಸ್ವಾಗತ

ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023 ಚುನಾವಣಾ ಪೂರ್ವತಯಾರಿ ಪರಿವೀಕ್ಷಣೆಗೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ವಾಗತಿಸಿದರು.

ಕಾಂಗ್ರೆಸ್​ನ ಪ್ರಮುಖ ಬೇಡಿಕೆಗಳು

* ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅವ್ಯವಹಾರ ಮತ್ತು ಅಕ್ರಮಗಳು ಮತ್ತು ಚಿಲುಮೆ ಎಂಬ ಸಂಸ್ಥೆಯು ಮಾಡಿದ ವಂಚನೆಗೆ ಸಂಬಂಧಿಸಿದಂತೆ ಚುನಾವಣಾ ನೋಂದಣಿ ಅಧಿಕಾರಿಗಳು ಸಂಬಂಧಿಸಿದ ವರದಿಗಳನ್ನು ಬಹಿರಂಗಪಡಿಸಿ ಮತ್ತು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.

* ಮತದಾರರ ಹೆಸರುಗಳ ಅಕ್ರಮ ಸೇರ್ಪಡೆಗಳನ್ನು ಅಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

* ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಚೋದನೆ ತಡೆಗಟ್ಟಲು ನೀತಿ ಸಂಹಿತೆಯನ್ನು ತಕ್ಷಣವೇ ಪ್ರಕಟಿಸಬೇಕು.

* ಗುಜರಾತ್, ಉತ್ತರ ಪ್ರದೇಶ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಳಸಿದ ಇವಿಎಂ ಗಳನ್ನು ಬಿಟ್ಟು ಬೇರೆ ಇವಿಎಂ ಬಳಸಬೇಕು.

* ಪಿಎಂ, ಸಿಎಂ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇತರ ಸಚಿವರು ಮತ್ತು ಇತರ ಅಧಿಕಾರಿಗಳು ಅಧಿಕಾರ ದುರುಪಯೋಗವನ್ನು ತಪ್ಪಿಸಲು ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು.

* ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜಿಸಬೇಕು.

* 3 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಒಂದೇ ಸ್ಥಳದಲ್ಲಿ ಮತ್ತು ಸ್ಥಳೀಯ ಜಿಲ್ಲೆಗಳಲ್ಲಿ ಇರುವ ಅಧಿಕಾರಿಗಳನ್ನು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಇತರ ಸ್ಥಳಗಳಿಗೆ ಸ್ಥಳಾಂತರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

* ಪ್ರಸ್ತುತ ಡಿ.ಜಿ.ಪಿ.ಯನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು.

* ಆಡಳಿತ ಪಕ್ಷದಿಂದ ಸಾಮಾಜಿಕ ಮಾಧ್ಯಮಗಳ ದುರುಪಯೋಗ ತಡೆಗಟ್ಟಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತು ಅದನ್ನು ಮೇಲ್ವಿಚಾರಣೆ ಮಾಡಲು ಪಾರದರ್ಶಕ ಸಮಿತಿ ನೇಮಿಸಿ ಮತ್ತು ಅಭ್ಯರ್ಥಿಯ ವೆಚ್ಚಕ್ಕೆ ಸಾಮಾಜಿಕ ಮಾಧ್ಯಮದ ವೆಚ್ಚವನ್ನು ತೆಗೆದುಕೊಳ್ಳಬೇಕು.

* ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳ ಟೆಂಡರ್​ಗಳು, ಬಿಡ್​ಗಳನ್ನು ನಿಲ್ಲಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

* ಗಡಿ ಪ್ರದೇಶಗಳು ಮತ್ತು ಚೆಕ್ ಪೋಸ್ಟ್ ಸೇರಿ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜಿಸಬೇಕು

* ಮತದಾರರಿಗೆ ಕುಕ್ಕರ್​ಗಳು, ಟಿವಿ, ಸೀರೆ, ಚಿನ್ನ, ನಗದು ಮತ್ತು ಇತರ ವಸ್ತುಗಳನ್ನು ಅಕ್ರಮವಾಗಿ ವಿತರಿಸುವ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು.