ಜಿಲ್ಲೆ

ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಿಗದಿ

ಮೈಸೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಚುನಾವಣೆಗೆ ಅ.13 ರಂದು ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಅ.18 ಕಡೆಯ ದಿನ. ಅ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಂದೇ ಕಡೆಯ ದಿನ. ಅ.21 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಚುನಾವಣೆ ನಡೆಯಲಿದೆ.

ಮರು ಮತದಾನದ ಅವಶ್ಯಕತೆ ಇದ್ದರೆ ಅ.28 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಚುನಾವಣೆ ನಡೆಸಲಾಗುವುದು. ಮತ ಎಣಿಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಅ.31 ರಂದು ಬೆಳಗ್ಗೆ 8 ರಿಂದ ನಡೆಯಲಿದೆ. ಈ ಚುನಾವಣೆಯಲ್ಲಿ ನೋಟಾ ಚಲಾವಣೆಗೆ ಅವಕಾಶ ಇರುವುದಿಲ್ಲ. ನಂಜನಗೂಡು ತಾಲೂಕಿನ ರಾಂಪುರ ಗ್ರಾ.ಪಂ., ಬಿಳಿಗೆರೆ ಗ್ರಾ.ಪಂ., ತಿ.ನರಸೀಪುರ ತಾಲೂಕಿನ ಕೊತ್ತೇಗಾಲ ಗ್ರಾ.ಪಂ., ಕೆ.ಆರ್.ನಗರ ತಾಲೂಕಿನ ಹಳಿಯಾರು ಗ್ರಾ.ಪಂ.ಯಲ್ಲಿ ಖಾಲಿಯಾಗಿರುವ ತಲಾ ಒಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಚುನಾವಣಾ ವೇಳಾಪಟ್ಟಿಯಂತೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲು ನಿಗದಿಪಡಿಸಿರುವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗೆ ಸ್ಪರ್ಧಿಸಬಯಸುವ ಅಭ್ಯರ್ಥಿಗಳು ನಾಮಪತ್ರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ವೇಳಾಪಟ್ಟಿಯಂತೆ ಚುನಾವಣಾಧಿಕಾರಿಗೆ ಸಲ್ಲಿಸಬೇಕು.

ನಿಯಂತ್ರಣ ಕೊಠಡಿ:
ಗ್ರಾಮ ಪಂಚಾಯಿತಿ ಉಪಚುನಾವಣೆ ಸಂಬಂಧ ಯಾವುದೇ ಮಾಹಿತಿ ಹಾಗೂ ದೂರುಗಳ ನಿರ್ವಹಣೆಗಾಗಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ.1077, ಮೈಸೂರು ಉಪವಿಭಾಗಾಧಿಕಾರಿ- 0821-2422100, ಹುಣಸೂರು ಉಪವಿಭಾಗಾಧಿಕಾರಿ-08222-252073, ನಂಜನಗೂಡು ತಾಲೂಕು ಕಚೇರಿ- 08221-223108, ತಿ.ನರಸೀಪುರ ತಾಲೂಕು ಕಚೇರಿ- 08227-260210, ಕೆ.ಆರ್. ತಾಲೂಕು ಕಚೇರಿ- 08223-262234 ಅನ್ನು ಸಂಪರ್ಕಿಸಬಹುದು.

ಚುನಾವಣಾ ನೀತಿ ಸಂಹಿತೆ:
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308ಎಸಿ ರಂತೆ ಚುನಾವಣಾ ಸಂಹಿತೆಯು 2022ರ ಅ. 13 ರಿಂದ ರಿಂದ 31 ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಕ್ಕೆ ಮಾತ್ರ ಅನ್ವಯವಾಗುತ್ತದೆ.

ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮತದಾನವು ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯವರೆಗೆ ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಬೇಕು. ನಂತರ ಮೊಹರು ಮಾಡಿ ಅದರ ಕೀಯನ್ನು ಜಿಲ್ಲಾಧಿಕಾರಿ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕು.