ಹುಬ್ಬಳ್ಳಿ : ಜಗತ್ತಿನ ಆರ್ಥಿಕ ವ್ಯವಸ್ಥೆಯಲ್ಲಿ ಭಾರತ ಮೂರನೇ ಸ್ಥಾನ ಅಲಂಕರಿಸಲು ಮುನ್ನುಗ್ಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರು, ಚುನಾವಣೆ ಆಯೋಗಕ್ಕೆ ಸೆಡ್ಡು ಹೊಡೆದು ಇವಿಎಂ ಬದಲು ಮತಪತ್ರಗಳ ಮುಖಾಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವ್ಯಂಗ್ಯವಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳ ಮುಖಾಂತರ ನಡೆದ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವುದನ್ನು ಕಾಂಗ್ರೆಸ್ ಮರೆತಂತಿದೆ ಎಂದು ಟೀಕಿಸಿದ್ದಾರೆ.
ಇದೀಗ, ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಮಿತ್ರಪಕ್ಷಗಳು ಚುನಾವಣೆ ಸೋಲಿನ ಭಯದಲ್ಲಿ ದೇಶಾದ್ಯಂತ ಹೊಸ ನಾಟಕ ಆರಂಭಿಸಿದ್ದಾರೆ. ಚುನಾವಣೆ ಆಯೋಗ ಮತಗಳನ್ನು ಕಳ್ಳತನ ಮಾಡುತ್ತದೆಯೆಂದು ಆಧಾರ ರಹಿತ, ತಲೆಬುಡ ಇಲ್ಲದ ಆರೋಪ ಮಾಡುತ್ತಿರುವುದನ್ನು ಗಮನಿಸಿದರೆ, ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟಕ್ಕೆ ಭವಿಷ್ಯದ ಅಭದ್ರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಲು ಕಾಂಗ್ರೆಸ್ಗೆ ಯಾವುದೇ ವಿಷಯ ಇಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ವಿರೋಧ ಪಕ್ಷಗಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.